ನಗರಸಭೆ ನೂತನ ಅಧ್ಯಕ್ಷರ ಮೆರವಣಿಗೆ
ಸಿಂಧನೂರು: ನಗರಸಭೆ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್‌ನಿಂದ ಆಯ್ಕೆಯಾದ ಸೈಯ್ಯದ್ ಜಾಫರ್ ಜಾಗೀರದಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ತೆರದ ಜೀಪಿನಲ್ಲಿ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದರು.
ನಗರಸಭೆ ಮೈದಾನದಿಂದ ಕಿತ್ತೂರ ಚೆನ್ನಮ್ಮ ವೃತ್ತ, ಮಹಾತ್ಮಗಾಂಧಿ ವೃತ್ತ, ಬಸ್ ನಿಲ್ದಾಣದ ಮೂಲಕ ಬಸವ ವೃತ್ತ ತಲುಪಿ ನಂತರ ಹಳೇ ಬಜಾರ, ಮಸೀದಿಯವರಿಗೆ ಮೆರವಣಿಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಜಯಘೋಷಣೆಗಳನ್ನು ಕೂಗಿದರು.
ಸಿಡಿ ಮದ್ದುಗಳನ್ನು ಪ್ರಮುಖ ವೃತ್ತಗಳಲ್ಲಿ ಸಿಡಿಸಿದರು. ಪರಸ್ಪರ ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಸೈಯ್ಯದ್ ಜಾಫರ್ ಜಾಗೀರದಾರ್ ತಮ್ಮ ಅಧಿಕಾರದ ಅವಧಿಯಲ್ಲಿ ಪಟ್ಟಣಕ್ಕೆ ಹೆಚ್ಚಿನ ಮೂಲಭೂತ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ. ಶಾಸಕ ಹಂಪನಗೌಡ ಬಾದರ್ಲಿಯವರ ಮಾರ್ಗದರ್ಶನದಲ್ಲಿ ನಗರಕ್ಕೆ ಶುದ್ಧ ಕುಡಿವ ನೀರು, ರಸ್ತೆ, ಒಳಚರಂಡಿ, ವಿದ್ಯುತ್ ದೀಪ, ಮಹಿಳಾ ಶೌಚಾಲಯಗಳಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ಉಪಾಧ್ಯಕ್ಷೆ ಲಕ್ಷ್ಮಿ ರಮೇಶ ಮಾತನಾಡಿ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬುವುದು, ಸರ್ಕಾರದ ಯೋಜನೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಆರ್ಥಿಕವಾಗಿ ಅಭಿವೃದ್ಧಿಪಡಿಸುವಲ್ಲಿ ಶ್ರಮಿಸುವುದಾಗಿ ಹೇಳಿದರು. ಮೆರವಣಿಗೆಯಲ್ಲಿ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.