ಬಾಲಕಾರ್ಮಿಕ ಪದ್ಧತಿ; ಕಾರ್ಯಾಗಾರ ಯಶಸ್ವಿ
ರಾಯಚೂರು: ಇಲ್ಲಿನ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ಸರ್ವೋದಯ ಮಹಿಳಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು. ನಗರಸಭೆ ಸದಸ್ಯ ನೂರುದ್ದೀನ್ ಸಮಾರಂಭದಲ್ಲಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗಾಗಿದೆ. ಇದರ ನಿರ್ಮೂಲನೆ ನಿಟ್ಟಿನಲ್ಲಿ ಸಮಾಜದ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಿದೆ ಎಂದರು.
ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಸರೋಜಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಅಧ್ಯಕ್ಷತೆ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸೈಯದ್ ಹಫೀಜುಲ್ಲಾ, ವಿನಾಯಕ, ಮಾರೆಪ್ಪ ಆಗಮಿಸಿದ್ದರು. ಕಾರ್ಯಾಗಾರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಸೇರಿ ಸಂಸ್ಥೆಯ ಸಿಬ್ಬಂದಿ ಪಾಲ್ಗೊಂಡಿದ್ದರು.