ಮಳೆ ಹಾನಿ: ಪರಿಹಾರ ಕಾರ್ಯಕ್ಕೆ ರು. 50 ಲಕ್ಷ ಬಿಡುಗಡೆ
ಕನ್ನಡಪ್ರಭ ವಾರ್ತೆ ರಾಯಚೂರು ಸೆ.13
ಜಿಲ್ಲೆಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾದ ಹಾನಿ ಹಿನ್ನೆಲೆ ರು. 50 ಲಕ್ಷವನ್ನು ಪರಿಹಾರ ಕಾರ್ಯಕ್ಕಾಗಿ ಜಿಲ್ಲಾಡಳಿತಕ್ಕೆ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಅವರು ತಾಲೂಕಿನ ಜೆ.ಮಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಈಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆಗಳು ಸೇರಿ ಒಟ್ಟು ರು. 8.90 ಕೋಟಿ ಹಾನಿಯಾಗಿದೆ. ಜಿಪಂ ನಿಂದ ಒಟ್ಟು ರು. 8 ಕೋಟಿ ಮೊತ್ತದ ಹಾನಿಯ ಅಂದಾಜು ಸಲ್ಲಿಸಲಾಗಿದೆ. ಬೆಳೆ ಹಾನಿ ಸಮೀಕ್ಷೆ ಜಾರಿಯಲ್ಲಿದ್ದು, ಮುಂದಿನ ಎರಡು ದಿನದಲ್ಲಿ ವರದಿ ಸಿದ್ಧವಾಗಲಿದೆ ಎಂದು ಹೇಳಿದರು.
ಸಮಗ್ರ ವರದಿ: ಮಳೆಯಿಂದಾದ ಹಾನಿಯ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುತ್ತದೆ. ಆ ಮೂಲಕ ಪರಿಹಾರ ಕಾರ್ಯಕ್ಕೆ ಮತ್ತಷ್ಟು ಅನುದಾನಕ್ಕೆ ಬೇಡಿಕೆ ಇಡಲಾಗುತ್ತದೆ. ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆಯಾಗದು ಎಂದ ಅವರು, ಜಿಪಂ ನಲ್ಲಿ ರಸ್ತೆ ದುರಸ್ತಿಗೆ ಅನುದಾನದ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವೇ ನೇರವಾಗಿ ಪ್ರವಾಹ ಹಿನ್ನೆಲೆ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಒಟ್ಟು 104 ಮನೆಗಳು ಹಾನಿಗೀಡಾಗಿದ್ದು, ಈ ಬಗ್ಗೆ ಈಗಾಗಲೇ ರಾಜೀವಗಾಂಧಿ ವಸತಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ ವಸತಿ ನಿಗಮದಿಂದ ಪುನಾ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ವಿಶೇಷ ಪ್ರಸ್ತಾ ವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಶೀಘ್ರ ಪರಿಹಾರ: ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಜೆಸ್ಕಾಂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದು, ವಿದ್ಯುತ್ ಪರಿವರ್ತಕಗಳ ಕೊರತೆ, ವಿದ್ಯುತ್ ಸಂಪರ್ಕ ನೀಡಿಕೆ ಸೇರಿ ವಿವಿಧ ಜೆಸ್ಕಾಂ ಸಂಬಂಧಿ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್, ಶಾಸಕ ಪ್ರತಾಪಗೌಡ ಪಾಟೀಲ್, ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ, ನಗರಸಭೆ ಮಾಜಿ ಸದಸ್ಯ ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಸಹಾಯಕ ಆಯುಕ್ತೆ ಮಂಜುಶ್ರೀ, ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಸೈ ರಮೇಶ್ ಮೇಟಿ ಸೇರಿ ಅನೇಕರಿದ್ದರು.