ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಲಾಠಿ ಪ್ರಹಾರ
ಸಿಂಧನೂರು: ನಗರದಲ್ಲಿ ಭಾನುವಾರ ರಾತ್ರಿ ಗಣೇಶನಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದ ಘಟನೆ ನಡೆಯಿತು. ಇಲ್ಲಿನ ಬಸ್ ನಿಲ್ದಾಣದ ಬಳಿ ಸ್ಥಾಪಿಸಿದ್ದ ವೀರಸಾವರ್ಕರ್ ಗಜಾನನ ಮಂಡಳಿಯ ಗಣೇಶಮೂರ್ತಿಯನ್ನು ವಿಸರ್ಜನೆಗೆಂದು ಮೆರವಣಿಗೆಯಲ್ಲಿ ಬಡಿಬೇಸ್ ಪ್ರದೇಶದ ಪ್ರಾರ್ಥನಾ ಮಂದಿರದ ಬಳಿ ಕೊಂಡೊಯ್ಯುತ್ತಿದ್ದಾಗ ಮೆರವಣಿಗೆಯಲ್ಲಿದ್ದ ಯುವಕರು ಹಾಗೂ ಮತ್ತೊಂದು ಕೋಮಿನವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಕೈಮೀರುವ ಹಂತ ತಲುಪಿದಾಗ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರೆಂದು ಮೂಲಗಳು ತಿಳಿಸಿವೆ. ಘಟನೆಯ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಿದ್ದು ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.