ಗುಣಮಟ್ಟದ ಶಿಕ್ಷಣದಿಂದ ಸಮಾಜದಲ್ಲಿ ಪರಿವರ್ತನೆ
ಕನ್ನಡಪ್ರಭ ವಾರ್ತೆ, ರಾಯಚೂರು, ಸೆ.17
ಗುಣಮಟ್ಟದ ಶಿಕ್ಷಣ ನೀಡಿಕೆ ಮತ್ತು ಸಾಕ್ಷರತೆ ಪ್ರಮಾಣದ ಹೆಚ್ಚಳದ ಮೂಲಕ ದೇಶದ ಪ್ರಗತಿಗೆ ಶಿಕ್ಷಕರು ಸೇರಿ ಆಡಳಿತದ ಎಲ್ಲರೂ ಒಗ್ಗೂಡಿ ಶ್ರಮಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು.
ನಗರದಲ್ಲಿ ಮಂಗಳವಾರ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತಿತರೆ ಸಂಸ್ಥೆಗಳಿಂದ ಆಯೋಜಿಸಿದ್ದ ಸಾಕ್ಷರತಾ ಸಪ್ತಾಹ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಸಾಕ್ಷರತೆಯ ಪ್ರಮಾಣ ಕಳವಳಕಾರಿಯಾಗಿದೆ. ಈ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಅವುಗಳ ಅನುಷ್ಠಾನಕ್ಕೆ ಎಲ್ಲರೂ ಮುಂದಾಗಬೇಕಿದೆ ಎಂದರು.
ಸರ್ಕಾರಿ ಶಾಲೆಗಳ ಬಗ್ಗೆ ಅಪಸ್ವರ: ರಾಜ್ಯದ ಎಲ್ಲೆಡೆ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಗುಣಮಟ್ಟದ ಶಿಕ್ಷಣ ಇಂದಿಗೂ ಮರೀಚಿಕೆಯಾಗಿದೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಉತ್ತಮ ವೇತನ ಮತ್ತಿತರೆ ಸೌಲಭ್ಯ ನೀಡಲಾಗುತ್ತಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಅಪಸ್ವರ ಕೇಳಿಬರುತ್ತಿದ್ದು, ಈ ಬಗ್ಗೆ ಸರ್ಕಾರಿ ಶಾಲೆಗಳ ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ಸಲಹೆ ನೀಡಿದರು.
ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಕಡಿಮೆ ವೇತನದಲ್ಲಿಯೇ ಶಿಕ್ಷಕರನ್ನು ನೇಮಿಸಿಕೊಂಡರೂ ಆಡಳಿತ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಲಾಖೆಯನ್ನು ಸಮರ್ಪಕವಾಗಿ ಮುನ್ನಡೆಸುವಲ್ಲಿ ಎಡವುತ್ತಿದ್ದು, ಅದರಿಂದಲೇ ಶಿಕ್ಷಣದ ಗುಣಮಟ್ಟ ಏರಿಕೆ ಕಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗುಣಮಟ್ಟದ ಶಿಕ್ಷಣ ಎಲ್ಲರ ಆದ್ಯತೆಯಾಗಲಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿಕೆ ಎಲ್ಲರ ಆದ್ಯತೆಯಾಗಬೇಕು. ಅಲ್ಲದೆ, ಅನಕ್ಷರಸ್ಥರನ್ನು ಸಾಕ್ಷರರಾಗಿಸುವ ಗುರಿ ಎಲ್ಲರಲ್ಲಿ ಮೂಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಕಲಿಕೆಯತ್ತ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಆಸಕ್ತಿ ಬೆಳೆಸುವ ಅವಶ್ಯಕತೆಯಿದೆ ಎಂದರು.
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಹೊಂದುವುದು ಅವಶ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣವಿಲ್ಲದವನ ಬದುಕಿಗೆ ಬೆಲೆಯಿಲ್ಲದಂಥ ಸ್ಥಿತಿಯಿದೆ. ಇಂಥ ಪರಿಸ್ಥಿತಿಯಲ್ಲಿ ಕನಿಷ್ಠ ಪದವಿವರೆಗೆ ಅಧ್ಯಯನಕ್ಕೆ ಎಲ್ಲರೂ ಪ್ರೋತ್ಸಾಹಿಸುವುದು ಅವಶ್ಯ ಎಂದು ಸಚಿವ ಪಾಟೀಲ್ ಸಲಹೆ ನೀಡಿದರು.
ಸಾಕ್ಷರತೆ ಹೆಚ್ಚಳದಿಂದ ಪರಿವರ್ತನೆ ಸಾಧ್ಯ: ಸಾಕ್ಷರತೆಯ ಪ್ರಮಾಣ ಹೆಚ್ಚಳದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ. ಅದರಲ್ಲೂ ಮಹಿಳೆಯರು ಹಾಗೂ ಎಸ್ಸಿ, ಎಸ್ಟಿ ಸೇರಿ ಹಿಂದುಳಿದ ವರ್ಗದವರಲ್ಲಿ ಸಾಕ್ಷರರ ಸಂಖ್ಯೆ ಹೆಚ್ಚಳವಾಗಬೇಕಿದೆ ಎಂದು ಹೇಳಿದರು.
ಶಿಕ್ಷಣದ ಗುಣಮಟ್ಟದ ಹೆಚ್ಚಳ, ಸಾಕ್ಷರತೆಯ ಪ್ರಮಾಣದ ಹೆಚ್ಚಳಕ್ಕೆ ದಾರಿಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕಿದೆ. ಶಿಕ್ಷಣದ ಪಡೆಯುವಿಕೆಯಿಂದ ಮಾತ್ರ ಪ್ರಗತಿ ಸಾಧ್ಯ. ಹಾಗೆಯೇ ಸಮಾಜದಲ್ಲಿ ಬದಲಾವಣೆ ಕಾಣಲು ಪೂರಕ ಪರಿಸರ ನಿರ್ಮಾಣವಾಗಬಹುದಾಗಿದೆ ಎಂದು ಹೇಳಿದರು.
ಕಸಾಪ ಜಿಲ್ಲಾಧ್ಯಕ್ಷ ಮಹಾಂತೇಶ್ ಮಸ್ಕಿ ವಿಶೇಷ ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಪ್ರತಾಪಗೌಡ ಪಾಟೀಲ್, ತಿಪ್ಪರಾಜು ಹವಾಲ್ದಾರ್, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ್ ಮದ್ಲಾಪುರ, ನಗರಸಭೆ ಅಧ್ಯಕ್ಷೆ ಮಹಾದೇವಮ್ಮ, ಸದಸ್ಯ ಜಯಣ, , ಜಿಪಂ ಮಾಜಿ ಸದಸ್ಯ ಪಾಮಯ್ಯ ಮುರಾರಿ, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ವಯಸ್ಕರ ಶಿಕ್ಷಣಾಧಿಕಾರಿ ಆರ್.ಇಂದಿರಾ ಸೇರಿ ಅನೇಕರಿದ್ದರು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಸಾಕ್ಷರರು ಹಾಗೂ ಪ್ರೇರಕರು ಪಾಲ್ಗೊಂಡಿದ್ದರು.