ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿದ್ಯಾರ್ಥಿಗಳ ಪ್ರಗತಿಗೆ ಶಿಕ್ಷಕರ ಶ್ರಮ ಶ್ಲಾಘನೀಯ: ವಜ್ಜಲ್

Lingaraj Badiger
Updated On : 20 Sept 2013, 11:05 am

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಸೆ.19
ತಾಲೂಕಿನ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುವಲ್ಲಿ ಶಿಕ್ಷಕರ ಶ್ರಮ ಶ್ಲಾಘನೀಯವಾಗಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಗುರುವಾರ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ 2013-14ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನಿಗೆ ಗಾಳಿ, ಬೆಳಕು, ನೀರು, ಆಹಾರದಂತೆ ಶಿಕ್ಷಣ ಕೂಡ ಅಗತ್ಯವಾಗಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಕ್ಷೇತ್ರಗಳಲ್ಲಿ ಉನ್ನತ ಹುದ್ದೆ ಅಲಂಕರಿಸುವಲ್ಲಿ ಶಿಕ್ಷಕರ ಕೊಡುಗೆ ಪ್ರಮುಖ ಕಾರಣವಾಗಿದೆ. ಸಮಾಜದಲ್ಲಿ ಶಿಕ್ಷಕರಿಗೆ ಗೌರವ ಸ್ಥಾನ ನೀಡಲಾಗಿದ್ದು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಸಮಾನವಾಗಿ ಶಿಕ್ಷಣ ದೊರೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಾಕ್ಷರತಾ ಪ್ರಮಾಣದಲ್ಲಿ ಸಾಧನೆಗೈಯುತ್ತಿರುವುದು ಸಂತಸದ ಸಂಗತಿಯಾಗಿದೆ. ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಅನುಷ್ಠಾನಗೊಂಡರೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ದೊರೆಯಲಿದೆ ಎಂದರು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕಲ್ಪಿಸಿ: ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ದೊರಕಿಸಿಕೊಡುವಲ್ಲಿ ಶಿಕ್ಷಕರು ಆಸಕ್ತಿ ತೋರಬೇಕು. ಅಲ್ಲದೆ ತಮ್ಮ ಸ್ಥಾನಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.
ಸನ್ಮಾನ: ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ ಹಾಜಿಮಲಂಗ ಬಾಬಾ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಉಪಾಧ್ಯಕ್ಷೆ ಛೋಟೀಮಾ, ಬಿಇಒ ಅಮರಪ್ಪ ಭೋವಿ, ಕ್ಷೇತ್ರ ಸಮನ್ವಯಾಧಿಕಾರಿ ಈಶ್ವರಪ್ಪ ನೀರಡಗಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ ಪಾಟೀಲ್, ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಮೂಲಿಮನಿ, ಕಸಾಪ ಜಿಲ್ಲಾಧ್ಯಕ್ಷ ಮಹಾಂತೇಶ ಮಸ್ಕಿ, ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಛಲವಾದಿ, ನೌಕರರ ಸಂಘದ ಅಧ್ಯಕ್ಷ ಭೀಮಣ್ಣ ನಾಯಕ, ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷ ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗಲಿಂಗಪ್ಪ, ಸಹಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಲಿಂಗ ಗದ್ದಿ, ಪ್ರಾಥಮಿಕ ಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷ ಸಿದ್ರಾಮಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಗುರುಸಂಗಯ್ಯ ಗಣಾಚಾರಿ,  ರಾಮನಗೌಡ, ಟಿಜಿಟಿ ಸಂಘದ ಅಧ್ಯಕ್ಷ ಅಮರೇಗೌಡ ಅಗಸಿಮುಂದಿನ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಜಟ್ಟೆಪ್ಪ ಕಾಖಂಡಕಿ, ತಾಲೂಕು ಲಿಪಿಕ ನೌಕರರ ಸಂಘದ ಅಧ್ಯಕ್ಷ ಅಮರೇಶ ಗೌಡೂರು, ದಲಿತ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮ್ಯಾಗೇರಿ, ಮುಖಂಡ ಶಿವನಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement