ಆಸ್ತಿ, ಬೆಳೆ ಹಾನಿ ಸಮೀಕ್ಷೆಗೆ ಒತ್ತಾಯ
ರಾಯಚೂರು: ಜಿಲ್ಲೆಯಲ್ಲಿ ಈಚೆಗೆ ಸುರಿದ ಮಳೆಯಿಂದಾಗಿ ಉಂಟಾದ ಬೆಳೆ ಹಾನಿ ಮತ್ತು ಆಸ್ತಿ ಹಾನಿಗೆ ಸಂಬಂಧಿಸಿ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳುವಂತೆ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಕುರಿತು ಮಂಗಳವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಅನೇಕರು ಮನೆಗಳು ಬಿದ್ದಿವೆ. ರೈತರು ಭಾರಿ ಮಳೆಯಿಂದ ಬೆಳೆ ಹಾನಿಗೀಡಾಗಿದ್ದಾರೆಂದು ದೂರಿದರು.
ಮಳೆಯಿಂದಾಗಿ ರೈತರು ಬೆಳೆದಿದ್ದ ಲಕ್ಷಾಂತರ ರು. ಬೆಲೆಯ ಬೆಳೆ ಹಾಳಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರಣ ರಾಜ್ಯ ಸರ್ಕಾರ ಕೂಡಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಮಳೆಯಿಂದ ರಸ್ತೆ, ಸೇತುವೆ ಹಾಳಾಗಿದ್ದು, ಅದರಿಂದ ಅನೇಕ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ ಎಂದರು.
ಈ ಹಿನ್ನೆಲೆಯಲ್ಲಿ ರಸ್ತೆ, ಸೇತುವೆ ದುರಸ್ತಿಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು.
ಸಂಘಟನೆಯ ವಿಭಾಗೀಯ ಅಧ್ಯಕ್ಷ ಕೆ.ಎಸ್. ನಾಗರಾಜ ನೀರಮಾನವಿ, ಜಿಲ್ಲಾ ಉಪಾಧ್ಯಕ್ಷ ಶಿವರಾಜ್ ಹೊಸಪೇಟೆ, ಶಿವಶಂಕರ್, ಶಿವಪ್ಪ, ಸೋಮಶೇಖರ್ ಸೇರಿ ಅನೇಕರಿದ್ದರು.