ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ
ಕ.ಪ್ರ. ವಾರ್ತೆ ರಾಯಚೂರು ಏ.8
ಚುನಾವಣೆ ದೇಶದ ಭವಿಷ್ಯ ನಿರ್ಧರಿಸುವ ಮಹತ್ವದ ಗಳಿಗೆ. ಇಂಥ ಸಂದರ್ಭದಲ್ಲಿ ಎಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆ ಸುಧಾರಣೆಗೆ ಕಡ್ಡಾಯ ಮತದಾನ ಮಾಡುವಂತೆ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಕರೆ ನೀಡಿದರು.
ಅವರು ಮಾನವಿ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಜನರ ಆಶೋತ್ತರಗಳನ್ನು ಈಡೇರಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮತದಾನದ ಮೂಲಕ ವ್ಯವಸ್ಥೆ ಸುಧಾರಣೆಗೆ ಮುಂದಾಗುವಂತೆ ಮನವಿ ಮಾಡಿದರು.
ಆಮಿಷಕ್ಕೊಳಗಾಗದಿರಿ: ಆಸೆ, ಆಮಿಷಕ್ಕೆ ಒಳಗಾಗಿ ಮತವನ್ನು ಮಾರಾಟ ಮಾಡಿಕೊಳ್ಳುವುದು ನಮ್ಮನ್ನೇ ನಾವು ಮಾರಾಟ ಮಾಡಿಕೊಂಡಂತಾಗುತ್ತದೆ. ಜನರಿಗೆ ಮತದಾನದ ಪವಿತ್ರ ಕರ್ತವ್ಯದ ಬಗ್ಗೆ ಮನವರಿಕೆ ಮಾಡಿಕೊಡಲು, ಬೀದಿ ನಾಟಕ ನಡೆಸಲಾಗುತ್ತದೆ. ಜನರಲ್ಲಿ ಹೆಚ್ಚು ಜಾಗೃತಿ ಮೂಡಿ, ಎಲ್ಲರೂ ಮತದಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತಾಗಲಿ ಎಂದು ಕರೆ ನೀಡಿದರು.
ಈ ವೇಳೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮಾನ್ವಿ ತಾಲೂಕಿನ ಶಾಕಾಪುರ, ಸಿರವಾರ, ಬಲ್ಲಟಗಿ ಹಾಗೂ ಕಲೂರು ಗ್ರಾಮಗಳಲ್ಲಿ ಬೀದಿ ನಾಟಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಡಿಡಿಪಿಐ ರಾಮಾಂಜನೇಯ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್. ಇಂದಿರಾ ಸೇರಿ ಅನೇಕರಿದ್ದರು.