ಮುದಗಲ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸಮೀಪದ ನವಲಿ ಜಡಿಶಂಕರಲಿಂಗೇಶ್ವರ ದೇವಸ್ಥಾನದ ಬಳಿ ಯಾತ್ರಾ ನಿವಾಸ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದರ ಬಗ್ಗೆ ಅಧಿವೇಶನದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ಮಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ನಿದ್ರೆ ಮಾಡುತ್ತಿದ್ದರು. ಗೃಹ ಸಚಿವ ಜಾರ್ಜ್ ಖಾತೆ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕೂಡಲೇ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮರಳು ಮಾಫಿಯಾ: ರಾಜ್ಯದಲ್ಲಿ ಮರಳು ಮಾಫಿಯಾ ಸರಾಗವಾಗಿ ನಡೆಯುತ್ತಿದ್ದು, ಇದರಲ್ಲಿ ಸಿದ್ದರಾಮಯ್ಯ ಪುತ್ರ ಕೂಡಾ ಶಾಮೀಲಾಗಿದ್ದಾರೆ. ಪೊಲೀಸ್ ಮತ್ತು ಮುಖ್ಯಮಂತ್ರಿ ಕೃಪಾಕಟಾಕ್ಷದಿಂದ ಮರಳು ಮಾಫಿಯಾ ಎಗ್ಗಿಲ್ಲದೆ ಸಾಗಿದೆ. ಈ ದಂಧೆಯಲ್ಲಿ ಕಂದಾಯ, ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ಅರ್ಕಾವತಿ ಬಡಾವಣೆಯಲ್ಲಿ 541 ಎಕರೆ ಜಮೀನು ಡಿನೋಟಿಫೈ ಮಾಡಿದ್ದು, ಈ ಕುರಿತು ಆ.7ರಿಂದ ರಾಜ್ಯವ್ಯಾಪಿ ಹೋರಾಟ ಮಾಡಲಾಗುತ್ತಿದೆ ಎಂದರು.
ಮೈತ್ರಿ: ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ಇದರಿಂದ ಬಿಜೆಪಿ ಯಾವ ಕಾರಣಕ್ಕೂ ಎದುರುವುದಿಲ್ಲ. ರಾಜ್ಯದ ಜನತೆಗೆ ಇವರ ಬಂಡವಾಳ ಗೊತ್ತಾಗಿದೆ. ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ, ಮುಖಂಡರಾದ ಟಿ.ಆರ್. ನಾಯಕ, ಸಿದ್ದು ಬಂಡಿ ಇದ್ದರು.