ಶಿಸ್ತುಬದ್ಧ ಅಧ್ಯಯನದಿಂದ ಉತ್ತಮ ಸಾಧನೆ: ಡಿಸಿ
ರಾಯಚೂರು: ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ರಾಯಚೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2013-14ನೇ ವಿವಿಧ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಗರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಮಾತನಾಡಿ, ಮಕ್ಕಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ತರಬೇತಿ ಕಾರ್ಯಾಗಾರದ ಪ್ರಯೋಜನ ಪಡೆಯಬೇಕು. ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಭವಿಷ್ಯ ಉತ್ತಮಗೊಳಿಸಲು ಸಲಹೆ ನೀಡಿದರು.
ಹಿಂದುಳಿದ ವರ್ಗಗಳ ಮಕ್ಕಳು ಸಮಾಜದಲ್ಲಿ ಉತ್ತಮ ಫಲಿತಾಂಶ ಪಡೆದು ಉನ್ನತ ಶ್ರೇಣಿ ಪಡೆಯಲು, ಮಕ್ಕಳು ಶಿಸ್ತುಬದ್ಧವಾಗಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಕಲಿಕೆಯಲ್ಲಿರುವ ತೊಂದರೆಗಳನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪರಿಹರಿಸಿಕೊಂಡು ಮಾನಸಿಕ ಹಾಗೂ ಬೌದ್ಧಿಕವಾಗಿ ಬಲಿಷ್ಠರಾಗಬೇಕೆಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೈ.ಎ. ಕಾಳೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಗದೀಶ್ ಹೆಬ್ಬಳ್ಳಿ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಮತ್ತಿತರರಿದ್ದರು. ಈ ವೇಳೆ 2013ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.