ಸಂಗೊಳ್ಳಿ ರಾಯಣ್ಣ ಯುವಸೇನೆ ಸಂಘಟನೆ ಅಸ್ತಿತ್ವಕ್ಕೆ: ನಂದಾ
ರಾಯಚೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು 65 ವರ್ಷ ಕಳೆದರೂ ಜನತೆಗೆ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಾಧ್ಯವಾಗಿಲ್ಲ. ಇಂಥ ಅವ್ಯವಸ್ಥೆಯ ವಿರುದ್ಧ ಹೋರಾಡಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಸೇನೆಯನ್ನು ರಾಜ್ಯ ಮಟ್ಟದಲ್ಲಿ ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸಲಾಗುತ್ತಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ನಂದಾ ಕಟ್ಟಿಮನಿ ಹೇಳಿದರು.
ನಗರದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ಸಂಘಟನೆಯ ಹೊಣೆಯನ್ನು ತಮಗೆ ವಹಿಸಲಾಗಿದೆ ಎಂದು ತಿಳಿಸಿದರು. ಅನ್ಯಾಯದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸಂಘಟನೆಯ ಯುವ ಘಟಕ, ಕಾರ್ಮಿಕ ಘಟಕ, ಮಹಿಳಾ ಘಟಕ ಸೇರಿದಂತೆ ವಿವಿಧ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ನಗರ ಸೇರಿದಂತೆ ಗ್ರಾಮೀಣ ಭಾಗದ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದುವರಿಸಿಕೊಂಡು ಸಂಘಟನೆಯು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಶಾಂತಪ್ಪ ರಾಂಪುರ, ಮಲ್ಲಮ್ಮ, ಸೈಯದ್ ಕಾಸೀಂ ಸೇರಿ ಅನೇಕರಿದ್ದರು.