ಗುಲ್ಬರ್ಗದಲ್ಲಿ ನಾಳೆ ನಮೋ ರ್ಯಾಲಿ
ರಾಯಚೂರು: ಗುಲ್ಬರ್ಗದಲ್ಲಿ ಫೆ.28ರಂದು ನಡೆಯಲಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ನಗರದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ತೆರಳಲಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ನರಸಪ್ಪ ಯಕ್ಲಾಸಪುರ ಹೇಳಿದರು.
ನಗರದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಿಂದ 8 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಗುಲ್ಬರ್ಗಕ್ಕೆ ತೆರಳಲು ನಗರದಿಂದ 60 ಸಾರಿಗೆ ಸಂಸ್ಥೆಯ ಬಸ್ ಮತ್ತು 100 ಕ್ರೂಸರ್ ವಾಹನ ಬಳಸಲಾಗುತ್ತಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರ ಗುಲ್ಬರ್ಗ ರ್ಯಾಲಿ ಹಿನ್ನೆಲೆಯಲ್ಲಿ ನಗರ ಬಿಜೆಪಿ ಘಟಕದಿಂದ ಮನೆ ಮನೆಗೆ ಬಿಜೆಪಿ ಎಂಬ ಅಭಿಯಾನ ಕೈಗೊಂಡಿದ್ದು, ರಾಜ್ಯದಲ್ಲಿ ಕಳೆದ ಐದು ವರ್ಷದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನತೆಗೆ ಮನವರಿಕೆ ಮಾಡಲಾಗಿದೆ. ಅದೇ ರೀತಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯ ಬಗ್ಗೆಯೂ ತಿಳಿಸಿಕೊಡಲಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯನ್ನು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಎದುರಿಸಲಿದ್ದು, ಈಗಾಗಲೇ ವಿವಿಧೆಡೆ ನಡೆದ ರ್ಯಾಲಿಗಳಲ್ಲಿ ಪಕ್ಷಕ್ಕೆ ಭಾರೀ ಜನಬೆಂಬಲ ದೊರೆತಿದೆ. ಗುಲ್ಬರ್ಗದಲ್ಲಿ ನಡೆಯುವ ರ್ಯಾಲಿಯಲ್ಲಿಯೂ ಯಶಸ್ಸು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಿಂದ ಮಾಜಿ ಸಚಿವ ಶಿವನಗೌಡ ನಾಯಕ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ. ಈಗಾಗಲೇ ವರಿಷ್ಠರಿಗೆ ಶಿವನಗೌಡ ನಾಯಕ ಅವರ ಹೆಸರು ಶಿಫಾರಸು ಮಾಡಿ ಕಳಿಸಲಾಗಿದೆ ಎಂದ ಅವರು, ವರಿಷ್ಠರು ಸೂಚಿಸುವ ಅಭ್ಯರ್ಥಿಯ ಪರವಾಗಿ ಚುನಾವಣೆಯಲ್ಲಿ ದುಡಿದು ಅಭ್ಯರ್ಥಿಯ ಗೆಲವಿಗೆ ಶ್ರಮಿಸುವುದಾಗಿ ಹೇಳಿದರು.
ಈಗಾಗಲೇ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು, ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಲಾಗಿದೆ. ಈ ಎಲ್ಲ ಕಾರ್ಯಕರ್ತರು ಗುಲ್ಬರ್ಗದಲ್ಲಿ ನಡೆಯುವ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಿಂದ 8 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದರು.
ಪಕ್ಷದ ಪ್ರಮುಖರಾದ ದೊಡ್ಡಮಲ್ಲೇಶಪ್ಪ, ಆಂಜನೇಯ ಯಕ್ಲಾಸಪುರ, ಬಂಗಿ ನರಸರೆಡ್ಡಿ, ಕಡಗೋಲು ರಾಮಚಂದ್ರ ಸೇರಿ ಅನೇಕರಿದ್ದರು.
ಯಶಸ್ವಿಗೆ ಮನವಿ
ಮಸ್ಕಿ ವರದಿ: ಹುಬ್ಬಳ್ಳಿ ಮತ್ತು ಗುಲ್ಬರ್ಗ ನಗರಗಳಲ್ಲಿ ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಯುವಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದು, ಸಮಾವೇಶದ ಯಶಸ್ವಿಗೆ ಮಸ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮೇಶ ನಾಯಕ ಬಳಗಾನೂರು ಮನವಿ ಮಾಡಿದ್ದಾರೆ.