ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ರಾಯಚೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧ್ಯಕ್ಷ ವಸಂತಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಎ.ವಸಂತಕುಮಾರ, ಕೆಪಿಸಿಸಿ ಸೂಚನೆ ಮೇರೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಕೈಗೊಂಡು ಲೋಕಸಭಾ ಚುನಾವಣೆಗೆ ಪೂರಕ ಪ್ರಚಾರ ಕೈಗೊಳ್ಳಬೇಕಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಸೂಚನೆ ನೀಡಿದರು.
ಲೋಕಸಭೆ ಚುನಾವಣೆಗಾಗಿ ಪ್ರಚಾರ ಸಮಿತಿಯವರು ಎಲ್ಲಾ ಬ್ಲಾಕಿನ ಅಧ್ಯಕ್ಷರೊಡನೆ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ ನಡೆಸಲು ಸೂಚಿಸಿದ ಅವರು, ಪ್ರತಿಯೊಂದು ಬ್ಲಾಕ್ ಹಾಗೂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಮಾವೇಶವನ್ನು ಈ ತಿಂಗಳ 15ರೊಳಗೆ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಎ.ಪಾಪಾರೆಡ್ಡಿ ಹಾಗೂ ಕೆಪಿಸಿಸಿ ಸದಸ್ಯ ಪಾರಸಮಲ್ ಸುಖಾಣಿ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಮರೇಗೌಡ ಹಂಚಿನಾಳ, ಕಾರ್ಯದರ್ಶಿ ಕಡಗೋಳ ಶರಣಪ್ಪ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.