ಇಂದು ರಾಜ್ಯ ಮಟ್ಟದ ಜಾಗೃತಿ ಸಮಾವೇಶ
ಸಿಂಧನೂರು: ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜ.5ರಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಬಾಂಧವರು ಭಾಗವಹಿಸಲು ರಾಜ್ಯ ಮಡಿವಾಳ ಯುವ ವೇದಿಕೆಯ ಉಪಾಧ್ಯಕ್ಷ ಎಚ್.ಬಸವರಾಜ ವಕೀಲರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಮಡಿವಾಳ ಜನಾಂಗ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಜನಾಂಗದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಮಡಿವಾಳ ಸಂಘದ ಕರೆಯ ಮೇರೆಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದ ಸದಸ್ಯರು, ಸಮುದಾಯದ ರಾಜ್ಯ ಮುಖಂಡರು, ಜಿಲ್ಲಾ ಮತ್ತು ತಾಲೂಕು ಸಂಘಟನೆಗಳ ಪದಾಧಿಕಾರಿಗಳು, ಸಮುದಾಯದ ಬುದ್ಧಿಜೀವಿಗಳು ಭಾಗವಹಿಸಲಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ.