ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಆರೋಪ; ಧರಣಿ
ಕ.ಪ್ರ. ವಾರ್ತೆ ರಾಯಚೂರು ಜ.9
ನಗರದ ಒಪೆಕ್ ಆಸ್ಪತ್ರೆ ಬಹುತೇಕ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದ್ದ ಸರ್ಕಾರಕ್ಕೆ ತೀವ್ರ ಹಿನ್ನಡೆ ಉಂಟು ಮಾಡುವಂಥ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಬಾಲಕನಿಗೆ ಸೂಕ್ತ ಸಮಯದಲ್ಲಿ ವೈದ್ಯರು ಚಿಕಿತ್ಸೆ ನೀಡದ್ದರಿಂದ ಆತ ಸಾವಿಗೀಡಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತನ ಸಂಬಂಧಿಗಳು ಮತ್ತು ವಿವಿಧ ಸಂಘಟನೆಯವರು ವೈದ್ಯರ ನಿರ್ಲಕ್ಷ್ಯ ಖಂಡಿಸಿ ಗುರುವಾರ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ನಗರದ ಸ್ಟೇಷನ್ ರಸ್ತೆಯಲ್ಲಿ ಬಾಲಕ ತಾಯಪ್ಪ ಗೆ ಬುಧವಾರ ಬೆಳಗ್ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯ ಗೊಂಡಿದ್ದ. ಆತನನ್ನು ಕೂಡಲೇ ನಗರದ ಒಪೆಕ್ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯದಿಂದ ಬಳಲಿದ್ದ ಆತನಿಗೆ ಆಸ್ಪತ್ರೆಯಲ್ಲಿನ ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿಸಲಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆಂದು ಕುಟುಂಬದವರು ಆರೋಪಿಸಿದ್ದಾರೆ.
ನಿರ್ಲಕ್ಷ್ಯ: ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಬಳಿ ಸೇರಿದ ಕುಟುಂಬದವರು ಮತ್ತು ವಿವಿಧ ಸಂಘಟನೆಗಳ ಕಾರ್ಯಕ ರ್ತರು ಒಪೆಕ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ಬಾಲಕನ ಸಾವಿಗೆ ಕಾರಣರಾದ ವೈದ್ಯರ ನಿರ್ಲಕ್ಷ್ಯ ಖಂಡಿಸಿ ಬಾಲಕನ ಶವವಿರಿಸಿ ಪ್ರತಿಭಟನೆ ನಡೆಸಿದರು.
ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆಂದು ಆರೋಪಿಸಿ, ಸರ್ಕಾರದಿಂದ ಪರಿಹಾರ ದೊರಕಿಸಬೇಕು. ಕುಟುಂಬದವರಿಗೆ ಉದ್ಯೋಗ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಪರಿಹಾರ ಭರವಸೆ: ಸುದ್ದಿ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ನೊಂದ ಕುಟುಂಬದವರಿಗೆ ಸಾಂತ್ವನ ಹೇಳಿ ಹೋರಾಟಗಾರರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಕುಟುಂಬದವರಿಗೆ ರು. 50 ಸಾವಿರ ಪರಿಹಾರ ಮತ್ತು ಮೃತ ಬಾಲಕನ ತಾಯಿಗೆ ಉದ್ಯೋಗ ನೀಡುವಂತೆ ಬೇಡಿಕೆಯಿರಿಸಲಾಯಿತು. ಸರ್ಕಾರದೊಂದಿಗೆ ಈ ವಿಷಯದ ಕುರಿತು ಚರ್ಚಿಸಿ ಸೂಕ್ತ ಪರಿಹಾರ ದೊರಕಿಸುವ ಕುರಿತು ಜಿಲ್ಲಾಧಿಕಾರಿ ಭರವಸೆ ನೀಡಿದ ನಂತರ ಹೋರಾಟ ಹಿಂಪಡೆಯಲಾಯಿತು.
ಆರೋಪ: ಕಳೆದ ಒಂದೂವರೆ ವರ್ಷದಿಂದ ಮುಚ್ಚಿದ್ದ ಇಲ್ಲಿನ ಒಪೆಕ್ ಆಸ್ಪತ್ರೆಯನ್ನು ರಾಜ್ಯ ಸರ್ಕಾರ ಕಳೆದ ನ.1ರಂದು ಪುನಾರಂಭ ಗೊಂಡಿತ್ತು. ಹಂತಹಂತವಾಗಿ ವಿವಿಧ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ ಆಸ್ಪತ್ರೆಗೆ ನೇಮಿಸುವ ವೇಳೆ ತಜ್ಞ ವೈದ್ಯರು ದೊರೆಯದೇ ಹೋಗಿದ್ದರಿಂದ ಸ್ಥಳೀಯವಾಗಿ ಖಾಸಗಿ ಆಸ್ಪತ್ರೆಗಳನ್ನು ಹೊಂದಿರುವ ವೈದ್ಯರನ್ನೇ ನೇಮಿಸಿಕೊಂಡಿದ್ದರಿಂದ ಒಪೆಕ್ ಆಸ್ಪತ್ರೆಯಲ್ಲಿ ವೈದ್ಯರು ಸೇವೆಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿಯೇ ಬಾಲಕನನ್ನು ಆಸ್ಪತ್ರೆಗೆ ಸೇರಿಸಿದ ನಂತರದಲ್ಲಿ ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡಿಲ್ಲ ಎಂದು ಹೇಳಲಾಗಿದ್ದು, ಅದರಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.