13ರಂದು ಸಿದ್ದರಾಮೇಶ್ವರ ಜಯಂತಿ ಆಚರಣೆಗೆ ನಿರ್ಧಾರ
ಲಿಂಗಸ್ಗೂರು: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ನಿಮಿತ್ತ ಸಹಾಯಕ ಆಯುಕ್ತರ ಕಚೇರಿಯಲ್ಲಿ ಎಸಿ ಟಿ.ಯೋಗೇಶ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.
ಸರ್ಕಾರದ ನಿರ್ದೇಶನದಂತೆ ಜ.13ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸುವ ಹಿನ್ನೆಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಸಹಾಯಕ ಆಯುಕ್ತ ಟಿ.ಯೋಗೇಶ್ ಮಾತನಾಡಿ, ಸರ್ಕಾರದ ವತಿಯಿಂದ ಆಚರಿಸುವ ಎಲ್ಲ ಗಣ್ಯರ ಜಯಂತಿಯಂತೆ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಅದ್ಧೂರಿಯಾಗಿ ಆಚರಿಸಲಾಗುವುದು. ಎಲ್ಲ ಇಲಾಖೆ ಕಚೇರಿಗಳಲ್ಲಿ ಕಡ್ಡಾಯವಾಗಿ ದಿನಾಚರಣೆ ಆಚರಿಸಬೇಕು. ನಂತರ ಬೆ.8.30ಕ್ಕೆ ಸರ್ಕಾರಿ ಪಪೂ ಕಾಲೇಜು ಮೈದಾನದಿಂದ ಹೊರಡುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ತದನಂತರ ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಬೇಕೆಂದು ಹೇಳಿದರು.
ಸಭೆಯಲ್ಲಿ ಉಪತಹಸೀಲ್ದಾರ್ ಖಾಜಾಹುಸೇನ್, ಕಸಾಪ ಅಧ್ಯಕ್ಷ ಸಿ.ಶರಣಪ್ಪ, ಪಪೂ ಕಾಲೇಜು ಪ್ರಾಚಾರ್ಯ ಟಿ.ಎಂ. ರಾಜಾಸಾಬ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ್, ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ. ರಾಚಪ್ಪ, ಮುಖಂಡರಾದ ಶಿವಾನಂದ ಐದನಾಳ, ಹನುಮಂತಪ್ಪ ಹಿರೇಮನಿ, ಶರಣಪ್ಪ, ವೀರೇಶ ವಡ್ಡರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.