ಸಂಚಾರ ನಿಯಮ ಪಾಲಿಸಿದ್ರೆ ಅಪಘಾತ ತಡೆ: ಎಸ್ಪಿ ಅಶೋಕ
ರಾಯಚೂರು: ಸಂಚಾರ ನಿಯಮಗಳ ಉಲ್ಲಂಘನೆಯಿಂದಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ನಿಯಮ ಪಾಲನೆ ಮೂಲಕ ಅಪಘಾತಗಳಿಗೆ ತಡೆಹಾಕುವಂತೆ ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ ಕರೆ ನೀಡಿದರು.
ನಗರದ ಗಂಜ್ ವೃತ್ತದಲ್ಲಿ ಭಾನುವಾರ ಬೆಳಗ್ಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ 2ನೇ ದಿನ ಆಯೋಜಿಸಿದ್ದ ಮ್ಯಾರಾಥಾನ್‌ಗೆ ಚಾಲನೆ ನೀಡಿ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವುದು ಅಪಘಾತಕ್ಕೆ ದಾರಿ ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಸ್ತೆ ಸುರಕ್ಷತಾ ಸಪ್ತಾಹದ ಸಂದರ್ಭದಲ್ಲಿ ಜನರಲ್ಲಿ ಸಂಚಾರ ನಿಯಮಗಳ ಪಾಲನೆ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದ ಅವರು, ಅಪಘಾತ ತಡೆಯುವ ನಿಟ್ಟಿನಲ್ಲಿ ಜನತೆ ಸಹಕರಿಸುವಂತೆ ಮನವಿ ಮಾಡಿದರು.ಡಿವೈಎಸ್ಪಿ ಎಂ.ಪಾಷಾ ಸೇರಿದಂತೆ ಸಂಚಾರ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದ್ದರು.