ಸಚಿವರ ವಜಾಕ್ಕೆ ಆಗ್ರಹ
ಕ.ಪ್ರ. ವಾರ್ತೆ ರಾಯಚೂರು ಜ.16
ದಕ್ಷ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರಿಗೆ ಚಿಕಿತ್ಸೆ ಕೊಡಿಸುವಲ್ಲಿ ನಿರ್ಲಕ್ಷ್ಯ ತೋರಿದ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಗುಲ್ಬರ್ಗ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕೆಂದು ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಸಂಘಟನೆ ಮುಖಂಡರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಾತಕಿ ಮುನ್ನಾ ಶಾರ್ಪ್ ಶೂಟರ್ ಹಲವಾರು ಕೊಲೆ, ದರೋಡೆ, ಗಾಂಜಾ ಮಾರಾಟ ಹಾಗೂ ಅಕ್ರಮ ಕಂಟ್ರಿ ಪಿಸ್ತೂಲ್‌ಗಳು ಹೊಂದಿದ್ದು ಪಾತಕಿ ಬಂಡೆಯವರ ಗುಂಡೇಟಿಗೆ ಬಲಿಯಾಗಿದ್ದಾನೆ. ಕಾರ್ಯಾಚರಣೆಯಲ್ಲಿ
ಗಂಭೀರ ಗಾಯಗೊಂಡ ಬಂಡೆ, ಉದ್ದಂಡಪ್ಪ ಅವರಿಗೆ ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಉನ್ನತ ಚಿಕಿತ್ಸೆಗಾಗಿ ಲಂಡನ್‌ಗೆ ಕರೆದೊಯ್ಯಲು ಸರ್ಕಾರ ಸೂಚಿಸಿದೆ ಎಂದು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದ ಮುಂದೆ ಹೇಳುವ ಸಚಿವರು ದಕ್ಷ ಅಧಿಕಾರಿಯನ್ನು ಬದುಕಿಸುವಲ್ಲಿ ವಿಫಲರಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ದುಡಿಯುತ್ತಿರುವ ಸಾವಿರಾರು ದಕ್ಷ, ನಿಷ್ಟಾವಂತ ಅಧಿಕಾರಿ, ಪೇದೆಗಳ ರಕ್ಷಣೆ ಜವಾಬ್ದಾರಿ ಸರ್ಕಾರದ್ದಾಗಿದೆ. ಬಂಡೆ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಚಿಕಿತ್ಸೆ ಕೊಡಿಸುವಲ್ಲಿ ನಿರ್ಲಕ್ಷ್ಯ ತೋರಿದ ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಸಂಘಟನೆ ಜಿಲ್ಲಾಧ್ಯಕ್ಷ ಎಸ್.ಶಿವಕುಮಾರ ಯಾದವ್ ಇನ್ನಿತರರು ಒತ್ತಾಯಿಸಿದ್ದಾರೆ.