ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸಿಬಿಐ ತನಿಖೆಗೆ ಆಗ್ರಹ
ರಾಯಚೂರು: ಮಾನವಿ ತಾಲೂಕಿನ ಜಾನೇಕಲ್ನಲ್ಲಿ ಇತ್ತೀಚೆಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಜೂ.13ರಂದು ಮಾನವಿ ತಾಲೂಕಿನ ಜಾನೇಕಲ್ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದುವರೆಗೆ ಸರ್ಕಾರ ಆರೋಪಿಗಳ ಪತ್ತೆಗೆ ಮುಂದಾಗಿಲ್ಲ ಎಂದು ಆರೋಪಿಸಿದರು. ಘಟನೆ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ ಹೋರಾಟಗಾರರು ಸಿಒಡಿ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳ ಪತ್ತೆಯಲ್ಲಿ ವಿಫಲರಾಗಿರುವ ಹಿನ್ನೆಲೆ ಸಿಬಿಐಗೆ ಒಪ್ಪಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಮನೋಹರ ಮೋರೆ, ತಿಮ್ಮಾರೆಡ್ಡಿ, ಮಲ್ಲಪ್ಪ ಹೊಸಮನಿ, ಭೀಮರಾಯ ಇದ್ದರು.