ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಜೇವರ್ಗಿ: ತಾಲೂಕಿನ ಕಾಸರಭೋಸಗಾ ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಘಟನೆ ಖಂಡಿಸಿ ವಿಶ್ವಕರ್ಮ ಸಮಾಜ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕು. ರಾಜ್ಯ ಸರ್ಕಾರ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಬಾಲಕಿಯ ಕುಟುಂಬ ವರ್ಗದವರಿಗೆ ಸೂಕ್ತ ಭದ್ರತೆ ನೀಡಬೇಕು. ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಕಲ್ಪಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ತಹಸೀಲ್ದಾರ್ ಶರಣಬಸಪ್ಪ ಮುಡಬಿ ಅವರ ಮುಖಾಂತರ ಸಿಎಂಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಗುಂಡಣ್ಣ ಬಡಿಗೇರ, ಪ್ರಧಾನ ಕಾರ್ಯದರ್ಶಿ ಮನೋಹರ ಪಂಚಾಳ, ಕಾರ್ಯದರ್ಶಿ ಚಿದಾನಂದ ಇಜೇರಿ, ರಾಜಶೇಖರ ವಿಶ್ವಕರ್ಮ, ವಿಶ್ವನಾಥ ಆಚಾರ್ಯ, ಶ್ರೀಶೈಲ ನಗನೂರ, ಶಿವಣ್ಣ ವಿಶ್ವಕರ್ಮ, ಪ್ರಕಾಶ ಲಕ್ಷ್ಮೀಪುರ ಸೇರಿದಂತೆ ವಿಶ್ವಕರ್ಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.