ಇಂದು ಕಂದಾಯ ಅದಾಲತ್
ಸಿಂಧನೂರು: ತಾಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಗುಂಜಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ರೈತರಿಗಾಗಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಜೂ.7ರಂದು ಹಮ್ಮಿಕೊಳ್ಳಲಾಗಿದೆ ಎಂದು ಲಿಂಗಸುಗೂರು ಸಹಾಯಕ ಆಯುಕ್ತ ಟಿ.ಯೋಗೇಶ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವರ್ಗಾವಣೆ, ಪಹಣಿ ತಿದ್ದುಪಡಿ ಮತ್ತಿತರ ಕೆಲಸಗಳನ್ನು ಸ್ಥಳದಲ್ಲಿಯೇ ಮಾಡಿಕೊಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಸಿಂಧನೂರು ತಾಲೂಕಿನ ಗುಂಜಳ್ಳಿ ಗ್ರಾಮವನ್ನು ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದ್ದು, ಇದರ ಪ್ರತಿಕ್ರಿಯೆಯನ್ನು ಆಧರಿಸಿ ಪ್ರತಿ ಹೋಬಳಿಯಲ್ಲೂ ಈ ಕಾರ್ಯಕ್ರಮ ವಿಸ್ತರಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ. ಜೂ.7ರಂದು ನಡೆಯುವ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ರೈತರು ವರ್ಗಾವಣೆ, ಪಹಣಿ ತಿದ್ದುಪಡಿ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಮ್ಮ ಕುಂದು-ಕೊರತೆಗಳನ್ನು ಹೇಳಿಕೊಳ್ಳಬಹುದಾಗಿದೆ ಎಂದು ತಿಳಿಸಿರುವ ಅವರು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದಿದ್ದಾರೆ.