ಸಮಸ್ಯೆಗೆ ನಮೋಶಿ ಸ್ಪಂದಿಸಿಲ್ಲ
ಕ.ಪ್ರ. ವಾರ್ತೆ ರಾಯಚೂರು ಜೂ. 18
ಮರುಆಯ್ಕೆ ಬಯಸಿ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಶಶಿಲ್ ನಮೋಶಿ ಅವರು ಶಿಕ್ಷಕರಿಂದ ಮತ ಪಡೆದು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಮತದಾರರನ್ನು ಕಡೆಗಣಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರವನ್ನು ಇದುವರೆಗೆ ಶಿಕ್ಷಕರಲ್ಲದವರು ಪ್ರತಿನಿಧಿಸಿದ್ದಾರೆ. ಅದರಿಂದಾಗಿಯೇ ಈಗಲೂ ಶಿಕ್ಷಕರ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ ಎಂದು ಟೀಕಿಸಿದರು.
ಜಿಲ್ಲೆಗೆ ಅನ್ಯಾಯ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ. ಅದರಲ್ಲೂ ರಾಯಚೂರು ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಅವರು ಪ್ರಯತ್ನಿಸಿದ್ದಾರೆ. ಆದರೆ ಬಿಜೆಪಿಯಿಂದ ಅನೇಕ ಬಾರಿ ಆಯ್ಕೆಯಾಗಿದ್ದರೂ ಈಶಾನ್ಯ ಕ್ಷೇತ್ರದ ಸದಸ್ಯರು ಜಿಲ್ಲೆಯನ್ನು ಕಡೆಗಣಿಸಿದ್ದಾರೆ.
ಅದರಲ್ಲೂ ಶಶಿಲ್ ನಮೋಶಿ ಮೂರು ಬಾರಿ ಆಯ್ಕೆಯಾಗಿದ್ದರೂ ಜಿಲ್ಲೆಗೆ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಭೇಟಿ ನೀಡಿ ನಂತರ ಜಿಲ್ಲೆಗೆ ಅನ್ಯಾಯ ಮಾಡಿದ ಅನೇಕ ಉದಾಹರಣೆಗಳಿವೆ ಎಂದು ಟೀಕಿಸಿದರು.
ಅಂಬಲಗಿ ಬೆಂಬಲಿಸಿ: ಜಿಲ್ಲೆಗೆ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಕೊಡುಗೆಯೇನೂ ಇಲ್ಲ ಎಂಬುದನ್ನು ಮತದಾರರು ಅರ್ಥೈಸಿಕೊಳ್ಳಬೇಕಿದೆ ಎಂದ ಅವರು, ಜೆಡಿಎಸ್ ಅಭ್ಯರ್ಥಿ ಎಂ.ಬಿ. ಅಂಬಲಗಿ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಶಿಕ್ಷಕರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳು ಅವರಿಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಅಭ್ಯರ್ಥಿ ಎಂ.ಬಿ. ಅಂಬಲಗಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ತಿಳಿಸಿದರು.
ಶಿಕ್ಷಕರಲ್ಲದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾರರ ಪ್ರಗತಿ ಅಸಾಧ್ಯ. ಶಿಕ್ಷಣ ಕ್ಷೇತ್ರದಲ್ಲಿನ ಮತದಾರರ ಸಮಸ್ಯೆಗಳ ಪರಿಚಯವಿದ್ದವರು ಮಾತ್ರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹೋರಾಡಬಲ್ಲರು ಎಂದು ಎಚ್ಚರಿಸಿದರು.
ನೇಮಕಾತಿಯಲ್ಲಿ ಅಕ್ರಮ- ಆರೋಪ: ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರು ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿದ್ದಾರೆ. ಹೈ.ಕ. ಶಿಕ್ಷಣ ಸಂಸ್ಥೆಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಆರೋಪ ಅವರ ಮೇಲಿದೆ. ಆರೋಪ ಎದುರಿಸುತ್ತಿರುವವರಿಗೆ ಬುದ್ಧಿವಂತ ವರ್ಗವೆಂದೇ ಗುರುತಿಸಿಕೊಂಡಿರುವ ಶಿಕ್ಷಕರು ಬೆಂಬಲಿಸದಂತೆ ಮನವಿ ಮಾಡಿ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಂದ ಮಾತ್ರ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸಾಧ್ಯ. ಈ ನಿಟ್ಟಿನಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಯುಸೂಫ್ ಖಾನ್, ಆರ್.ತಿಮ್ಮಾರೆಡ್ಡಿ ಸೇರಿದಂತೆ ಅನೇಕರಿದ್ದರು.