ಚುನಾವಣೆ; ಸಿದ್ಧತೆ ಪೂರ್ಣ
ದೇವದುರ್ಗ: ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ತಿಳಿಸಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ ಜೂ.20ರಂದು ನಡೆಯಲಿದ್ದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶವಿದೆ. ದೇವದುರ್ಗ ಹೋಬಳಿ ಮತದಾರರಿಗೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಜಾಲಹಳ್ಳಿ, ಅರಕೇರಾ, ಗಬ್ಬೂರು ಗ್ರಾಮಗಳ ಗ್ರಾಪಂಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ ಎಂದರು.
ನಮೋಶಿ ಗೆಲವು ಖಚಿತ
ಮಸ್ಕಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಗೆಲವು ನಿಶ್ಚಿತವೆಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂಗಮೇಶ ಹತ್ತಿಗುಡ್ಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ಚುನಾವಣೆಯಲ್ಲಿಯೂ ಅವರು ಸತತವಾಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಶಿಕ್ಷಕರ ಕುಂದು ಕೊರತೆಗಳ ಬಗ್ಗೆ ಅವರಿಗೆ ಕಾಳಜಿಯಿದ್ದು, ಪ್ರಸಕ್ತ ಚುನಾವಣೆಯಲ್ಲಿಯೂ ಅವರ ಗೆಲವು ಖಚಿತ ಎಂದಿದ್ದಾರೆ.