ತೆರಿಗೆ ವಂಚನೆ: ಕೇಸ್ ದಾಖಲಿಸಲು ಆಗ್ರಹ
ರಾಯಚೂರು: ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸರ್ಕಾರಕ್ಕೆ ತೆರಿಗೆ ವಂಚಿಸಿದವರ ವಿರುದ್ಧ ವಂಚನೆ ಪ್ರಕರಣ ದಾಖಲಿಸುವಂತೆ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಸೋಮವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಸಿಂಧನೂರು ತಾಲೂಕಿನ ಮಲ್ಲದಗುಡ್ಡದಲ್ಲಿ ಅಕ್ರಮ ಗಣಿಗಾರಿಕೆ ಕಳೆದ ಅನೇಕ ವರ್ಷಗಳಿಂದ ನಡೆಯುತ್ತಿದ್ದು, ಸರ್ಕಾರಕ್ಕೆ ಯಾವುದೇ ರೀತಿಯ ತೆರಿಗೆ ಪಾವತಿಸುತ್ತಿಲ್ಲ. ಕೋಟಿ ಕೋಟಿ ರು. ಗಳಿಸಿರುವ ಗಣಿಗಾರಿಕೆಯಲ್ಲಿ ತೊಡಗಿದವರು ಸರ್ಕಾರಕ್ಕೆ ವಂಚಿಸಿದ್ದಾರೆಂದು ಆರೋಪಿಸಿದರು.
ಕ್ರಿಮಿನಲ್ ಕೇಸ್ ಹಾಕಿ: ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಇದುವರೆಗೆ ನಡೆಸಿದ ಗಣಿಗಾರಿಕೆಗೆ ಪ್ರತಿಯಾಗಿ ತೆರಿಗೆ ವಸೂಲು ಮಾಡಬೇಕು. ಅಕ್ರಮಕ್ಕೆ ಬೆಂಬಲವಾಗಿರುವ ಕಂದಾಯ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದರು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ನಡೆಸಲಾಗಿದ್ದು, ಅಧಿಕಾರಿಗಳೇ ಬೆಂಬಲಕ್ಕೆ ನಿಂತಿರುವುದು ಶೋಚನೀಯ ಸಂಗತಿ. ಪರಿಸರ ಮಾಲಿನ್ಯಕ್ಕೆ ಕಾರಣರಾಗಿರುವ ಬಗ್ಗೆಯೂ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕೇಸ್ ದಾಖಲಿಸಿ ಶಿಕ್ಷೆಗೆ ಗುರಿಪಡಿಸುವಂತೆ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಬಸವರಾಜ್ ಕವಿತಾಳ, ಜಿಲ್ಲಾ ಖಜಾಂಚಿ ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ರವಿಕುಮಾರ್ ಎಂ., ಹಾಗೂ ನಾಗರಾಜ್ ಪೂಜಾರ್ ಆಗ್ರಹಿಸಿದ್ದಾರೆ.