ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅವಶ್ಯ: ನ್ಯಾ. ಪಾಟೀಲ್
ರಾಯಚೂರು: ದೇಶದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಲ್ಲಿ ಕಾನೂನಿನ ಅರಿವಿನ ಕೊರತೆಯಿಂದಾಗಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದಂಥ ಅಪರಾಧ ಪ್ರಕರಣ ಹೆಚ್ಚುತ್ತಿದ್ದು, ಇಂಥ ಅಪರಾಧದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಸೋಮವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಯುವಕ, ಯುವತಿಯರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ 2012ರಲ್ಲಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದ ಕೇಂದ್ರ ಸರ್ಕಾರ 2013ರ ಫೆ.3ರಂದು ಆ ಕಾಯ್ದೆ ಜಾರಿಗೊಳಿಸಿದೆ. ಅಪರಾಧ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲು ಈ ಕಾಯ್ದೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ಮಹಿಪಾಲರೆಡ್ಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಪಿ.ಜಿ. ಚಲುವಮೂರ್ತಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ಬಾನುರಾಜು ವಕೀಲರು, ನ್ಯಾಯವಾದಿ ಸಂಘದ ಕಾರ್ಯದರ್ಶಿ ಪ್ರಭುದೇವ, ವಕೀಲ ವಿ. ಸತೀಶ್, ಎನ್ನೆಸ್ಸೆಸ್ ಅಧಿಕಾರಿ ಶ್ರೀಮಂತ್ ಹೊಳ್ಕರ್ ಸೇರಿ ಕಾಲೇಜಿನ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳಿದ್ದರು.