ಕೇಂದ್ರ ಸ್ಥಾನ ಬಿಡದಿರಲು ಸೂಚನೆ
ರಾಯಚೂರು: ಜಿಲ್ಲೆಯಲ್ಲಿ ಏ.17ರಂದು ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿ ಸಕಾಲದಲ್ಲಿ ಮಾಹಿತಿ ಒದಗಿಸುವ ಸಂದರ್ಭವಿರುವುದರಿಂದ ಜಿಲ್ಲೆಯ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ತುರ್ತು ಸಂದರ್ಭಗಳಲ್ಲಿ ರಜೆ ಅಥವಾ ಸರ್ಕಾರಿ ಕೆಲಸದ ನಿಮಿತ್ತ ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಎಚ್ಚರಿಸಿದ್ದಾರೆ.
ರಜೆ ಪಡೆಯುವುದು ಅಥವಾ ಕೇಂದ್ರ ಸ್ಥಾನ ಬಿಡುವ ಸಂದರ್ಭ ಒದಗಿದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಪಡೆದೇ ತೆರಳುವಂತೆ ಹಾಗೂ ತಪ್ಪಿದಲ್ಲಿ ಅಂತಹವರ ವಿರುದ್ಧ ಅಗತ್ಯ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.