ನೀರು ಪೂರೈಕೆಗೆ ಅಗತ್ಯ ಕ್ರಮ
ಲಿಂಗಸ್ಗೂರು: ಲಿಂಗಸ್ಗೂರು ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡುಗಳ ಜನತೆಗೆ ಬೇಸಿಗೆಯಲ್ಲಿ ಕುಡಿವ ನೀರು ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ ಭರವಸೆ ನೀಡಿದರು.
ಪಟ್ಟಣಕ್ಕೆ ಸಮೀಪದ ಕೆರೆಗೆ ನೀರು ತುಂಬಿಸುವ ಕಾರ್ಯ ಪರಿಶೀಲನೆ ನಡೆಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆರೆಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರು ಸಂಗ್ರಹ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಕೆರೆ ಭರ್ತಿಯಾದರೆ ಬೇಸಿಗೆ ಅಂತ್ಯದವರೆಗೆ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ. ನಾರಾಯಣಪೂರ ಬಲದಂಡೆ ನಾಲೆಗಳಿಗೆ ಮಾ.20 ರವರೆಗೆ ನೀರು ಹರಿಸಲಾಗುತ್ತಿದೆ ಎಂದು ನೀರಾವರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಪುರಸಭೆ ಸಿಬ್ಬಂದಿ ಹಗಲು- ರಾತ್ರಿ ಕೆರೆಗೆ ನೀರು ತುಂಬಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆರೆಗೆ ನೀರು ತುಂಬಿಲು ಅಳವಡಿಸಿದ ವಿದ್ಯುತ್ ಪರಿವರ್ತಕ ಕಳೆದ ಒಂದು ದಶಕದಿಂದ ನಿರ್ವಹಣೆ ಮಾಡಿರುವುದಿಲ್ಲ. ವಿದ್ಯುತ್ ಪರಿವರ್ತಕದಲ್ಲಿ ತಾಂತ್ರಿಕ ತೊಂದರೆ ಕಂಡು ಬಂದರೆ ಮುಂಜಾಗ್ರತಾ ಕ್ರಮವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದೆಂದು ತಿಳಿಸಿದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ್ ಹಾಗೂ ಸಿಬ್ಬಂದಿ ಇದ್ದರು.