ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲವು; ವಿಶ್ವಾಸ
ಲಿಂಗಸ್ಗೂರು: ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಬದ್ಧವಾಗಿದ್ದು, ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ. ಜಿ.ಪರಮೇಶ್ವರ ಹೇಳಿದರು.
ತಾಲೂಕಿನ ಮಾವಿನಬಾವಿ ಗ್ರಾಮದಿಂದ ಲಿಂಗಸ್ಗೂರುವರೆಗೆ ಶುಕ್ರವಾರ ಹಮ್ಮಿಕೊಂಡಿದ್ದ ಭಾರತ ನಿರ್ಮಾಣ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷ ಆಡಳಿತ ನಡೆಸಿದ ಯುಪಿಎ ಸರ್ಕಾರ ಅನೇಕ ಅಭಿವೃದ್ಧಿಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರ ಬದುಕಿನಲ್ಲಿ ಮಹತ್ತರ ಬದಲಾವಣೆ ತರುವ ಅನೇಕ ಜನಪರ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಯುಪಿಎ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆಪಾದನೆ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ತರುವಲ್ಲಿ ನಿರತವಾಗಿದೆ ಎಂದರು.
ರಾಜ್ಯ ಸರ್ಕಾರದಿಂದ ಹಲವು ಯೋಜನೆ: ರಾಜ್ಯದಲ್ಲಿ ಕಳೆದ 8 ತಿಂಗಳಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಅನ್ನಭಾಗ್ಯ, ಕ್ಷೀರಭಾಗ್ಯ, ವಸತಿ ಮನೆ ಸೇರಿದಂತೆ ಹತ್ತಾರು ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರ ನೀರಾವರಿಗೆ ಪ್ರಥಮ ಆದ್ಯತೆ ನೀಡಿದ್ದು, ಪ್ರಥಮ ಬಜೆಟ್ನಲ್ಲಿ 9,600 ಕೋಟಿ ಹಾಗೂ ದ್ವಿತೀಯ ಬಜೆಟ್ನಲ್ಲಿ 11,000 ಕೋಟಿ ಮೀಸಲಿಟ್ಟಿದ್ದು, ಬರುವ ಐದು ವರ್ಷದ ಅವಧಿಯಲ್ಲಿ ನೀರಾವರಿಗೆ 50 ಸಾವಿರ ಕೋಟಿ ಮೀಸಲಿರಿಸಿ ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು.
ಕಾಂಗ್ರೆಸ್ ಟೀಕಿಸುವ ಹಕ್ಕಿಲ್ಲ: ಇತ್ತೀಚೆಗೆ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುವ ಮೂಲಕ ಬಿಜೆಪಿ ಕೇವಲ ಒಬ್ಬ ವ್ಯಕ್ತಿಯನ್ನು ಪ್ರಧಾನಿ ಮಾಡಲು ಹೊರಟಿದೆ. ಕೇಂದ್ರದಲ್ಲಿ ಆಡಳಿತ ನಡೆಸಿದ ಎನ್ಡಿಎ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಬಗ್ಗೆ ಹೇಳಬೇಕು. ಇನ್ನು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ, ರಾಜ್ಯದಲ್ಲಿ ಆಡಳಿತ ನಡೆಸಿದ ಅವಧಿಯಲ್ಲಿ ಭ್ರಷ್ಟಾಚಾರ ಆರೋಪದಡಿ ಯಡಿಯೂರಪ್ಪ ಸೇರಿದಂತೆ 14 ಜನರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ತೊರೆದು ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ ಬಳಿಕ ಬಿಜೆಪಿ ಸ್ವಚ್ಛವಾಗಿದೆ ಎಂದು ಹೇಳಿ ಪುನಃ ಬಿಜೆಪಿಗೆ ಬರಮಾಡಿಕೊಂಡು ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಕುಟುಕಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದ ಅನೇಕ ಜನಪರ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಮುಖಂಡರು, ಕಾರ್ಯಕರ್ತರು ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಭಗವಂತರಾಯ ವಿ. ನಾಯಕ ಅವರ ಗೆಲವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಎನ್.ಎಸ್.ಭೋಸರಾಜ, ಕಾರ್ಯದರ್ಶಿ ಭೂಪತಿ, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಪಕ್ಷದ ಜಿಲ್ಲಾಧ್ಯಕ್ಷ ಎ.ವಸಂತ ಕುಮಾರ, ಶಾಸಕರಾದ ಎ.ವೆಂಕಟೇಶ ನಾಯಕ, ಪ್ರತಾಪಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ರಾಜಾ ರಾಯಪ್ಪ ನಾಯಕ, ಮುಖಂಡರಾದ ಜಿ.ಎಸ್. ಹೂಲಗೇರಿ, ಭೂಪನಗೌಡ ಕರಡಕಲ್, ಮರಿಗೌಡ ಯಾದಗೀರ, ವಿಜಯಲಕ್ಷ್ಮೀ ಸೇರಿದಂತೆ ಇದ್ದರು.