ವಿದ್ಯಾರ್ಥಿಗಳೇ, ಕಡ್ಡಾಯ ಮತದಾನ ಮಾಡಿ..
ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರಾಮಾಣಿಕ ಮತ್ತು ಕಡ್ಡಾಯವಾಗಿ ಮತದಾನ ಮಾಡಬೇಕು. ಆಸೆ ಆಮಿಷಗಳಿಗೆ ಬಲಿಯಾಗದೇ ಬೆದರಿಕೆಗಳಿಗೆ ಬಗ್ಗದೇ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಸಲಹೆ ನೀಡಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಚುನಾವಣಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮತ ಚಲಾಯಿಸಿದ ನಂತರ ಮತದಾನದ ಗೌಪ್ಯತೆ ಕಾಪಾಡುವುದು ಅತೀ ಮುಖ್ಯ. ನಾಗರಿಕರು ಹಣ, ಹೆಂಡ, ಜಾತಿ, ಲಾಬಿಗಳಿಗೆ ಮತ ಮಾರಿಕೊಳ್ಳುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಈ ವೇಳೆ ಕಡ್ಡಾಯ ಮತದಾನ ಮಾಡುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ಜಿಲ್ಲಾ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕನುಮಪ್ಪ, ಪದವಿ ಕಾಲೇಜಿನ ಪ್ರಾಚಾರ್ಯ ಭೀಮರೆಡ್ಡಿ, ಡಿಇಡಿ ಕಾಲೇಜಿನ ಪ್ರಾಚಾರ್ಯ ಬಿಬ್ಬಿ ಬಾಚರಸ, ರಾಜೇಂದ್ರ ಪಾಟೀಲ್ ರೇವೂರ ಸೇರಿ ಅನೇಕರಿದ್ದರು. ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.