ಉತ್ತಮ ಆರೋಗ್ಯಕ್ಕೆ ಯೋಗ ಮಾಡಿ: ಅರುಣ್ ಸಲಹೆ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಏ.10
ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆಯಲು ಪ್ರತಿನಿತ್ಯ ಯೋಗ, ಧ್ಯಾನ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಆತ ತನ್ನ ನಿರಂತರ ಕಾಯಕದ ಒತ್ತಡದಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ.ಜಿ.ಎನ್. ಶಿವಣ್ಣರೆಡ್ಡಿ ಮಾತನಾಡಿ, ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆಯಲು ಒಳ್ಳೆಯ ವಾತಾವರಣ ಸೃಷ್ಟಿಸಿಕೊಳ್ಳಬೇಕು. ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾದರೆ ತಕ್ಷಣ ವೈದ್ಯರನ್ನು ಕಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಫ್ರಾನ್ಸಿ ಡಿಕಾಸ್ಟ, ರೆಡ್‌ಕ್ರಾಸ್ ಯುವ ಘಟಕದ ಕಾರ್ಯಕ್ರಮಾಧಿಕಾರಿ ರೇಷ್ಮೆ, ಆರ್. ರವಿ, ಶೈಲಜಾ, ಸಂಧ್ಯಾಕಾವೇರಿ ಮತ್ತಿತರರು ಇದ್ದರು.