ಈಶ್ವರಪ್ಪ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಶಿವಮೊಗ್ಗ: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಭಂಗ ತಂದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಎದುರಿಸುತ್ತಿರುವ ಡಿಸಿಎಂ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪನವರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರ ತಮ್ಮ ವಕೀಲ ಅಶೋಕ್ ಜಿ.ಭಟ್ ಮೂಲಕ ಸಿಆರ್‌ಪಿಸಿ ಕಲಂ 438ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕೆ.ಎಸ್. ಈಶ್ವರಪ್ಪನವರು ಏ.9ರಂದು ನಗರದ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಭಾಷಣ ಮಾಡಿದ್ದರು.
ಶಿವಮೊಗ್ಗವೊಂದರಲ್ಲಿಯೇ 68 ಬ್ರಾಹ್ಮಣ ಹೆಣ್ಣು ಮಕ್ಕಳನ್ನು ಮುಸ್ಲಿಂ ಯುವಕರು ಲವ್ ಜಿಹಾದ್ ಹೆಸರಿನಲ್ಲಿ ಹೊತ್ತೊಯ್ದಿದ್ದಾರೆ ಎಂದು ಹೇಳಿದ್ದರು. ಇದರ ಜೊತೆಗೆ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದ್ದರು.
ಈ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಸೂಚನೆಯ ಮೇರೆಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರ - 113ರ ಫ್ಲೈಯಿಂಗ್ ಸ್ಕ್ವಾಡ್ ತಂಡ -4ರ ಮುಖ್ಯಸ್ಥರು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಕೋಮು ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 153(ಎ) (ಧರ್ಮ, ಜಾತಿ, ಜನಾಂಗದ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಸು ಸೃಷ್ಟಿಸುವುದು), 295(ಎ) (ಉದ್ದೇಶಪೂರ್ವಕವಾಗಿ, ದುರುದ್ದೇಶದಿಂದ ಕೋಮು ಪ್ರಚೋದನೆ ಭಾವನೆ ಕೆರಳಿಸುವುದು), 298(ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು) ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ 125ರ ಅಡಿ ದೂರು ದಾಖಲಿಸಲಾಗಿತ್ತು.