ಪಠ್ಯೇತರ ಚಟುವಟಿಕೆಗೂ ಆಸಕ್ತಿ ತೋರಿಸಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.16
ಮಕ್ಕಳು ಶಿಕ್ಷಣದ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ಆಸಕ್ತಿ ತೋರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು.
ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 5 ರಿಂದ 16 ವರ್ಷದ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು, ಬೇಸಿಗೆ ರಜಾದಂತಹ ದಿನಗಳನ್ನು ಮಕ್ಕಳು ವ್ಯರ್ಥವಾಗಿ ಕಳೆಯುವ ಬದಲು, ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಿಕ್ಷಕರು ಮಕ್ಕಳಿಗೆ ಶಿಬಿರಗಳ ಬಗ್ಗೆ ಅಗತ್ಯವಾದ ಮಾಹಿತಿ, ಮಾರ್ಗದರ್ಶನಗಳನ್ನು ನೀಡಬೇಕು. ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಕೈಜೋಡಿಸಿದಾಗ ಮಾತ್ರ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಕಲ್ಯಾಣಾಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮಿಕಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್,
ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ, ಬಿ.ಜಿ. ಸುರೇಶ್ ಮತ್ತಿತರರು ಇದ್ದರು.