ಈಶ್ವರಪ್ಪಗೆ ಷರತ್ತುಬದ್ಧ ಜಾಮೀನು
ಶಿವಮೊಗ್ಗ: ಕೋಮು ಪ್ರಚೋದಕ ಭಾಷಣ ಮಾಡಿದ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿ ಬಂಧನ ಭೀತಿ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತು ಬದ್ದ ನಿರೀಕ್ಷಣಾ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್.ಎಂ.ಶೆಟ್ಟರ್, 25 ಸಾವಿರ ರುಪಾಯಿಗಳ ಬಾಂಡ್ ಜೊತೆಗೆ ಸಾಲ್ವೆಂಟ್ ಶ್ಯೂರಿಟಿ ನೀಡಬೇಕು. ದೂರುದಾರರಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಕೆಹಾಕುವುದಾಗಲಿ ಅಥವಾ ಆಶ್ವಾಸನೆ ನೀಡುವುದಾಗಲಿ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅಗತ್ಯವೆನಿಸಿದ ವೇಳೆ ತನಿಖಾಧಿಕಾರಿ ಮುಂದೆ ಖುದ್ದು ಹಾಜರಾಗುವಂತೆ ಷರತ್ತು ವಿಧಿಸಿ ಜಾಮೀನು ನೀಡಿದರು.