ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಪೌಷ್ಟಿಕತೆ ನಿವಾರಣೆ, ಆರೋಗ್ಯ ವೃದ್ಧಿಗೆ ಕ್ಷೀರಭಾಗ್ಯ

Rashmi Kasaragodu
Updated On : 2 Aug 2013, 11:07 am

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ಆ.1
ಜಿಲ್ಲೆಯ 1,59,212 ಮಕ್ಕಳು ಹಾಗೂ ಸುಮಾರು 99 ಸಾವಿರ ಅಂಗನವಾಡಿ ಮಕ್ಕಳಿಗೆ ಅನುಕೂಲವಾಗುವ 'ಕ್ಷೀರ ಭಾಗ್ಯ' ಯೋಜನೆಗೆ ಗುರುವಾರ ವಿದ್ಯುಕ್ತ ಚಾಲನೆ ದೊರೆಯಿತು.
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಶಿವಮೊಗ್ಗ ಸಹಕಾರ ಹಾಲು ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕ್ಷೀರ ವಿತರಿಸುವ ಮೂಲಕ ಜಿ.ಪಂ. ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಯೋಜನೆ ಚಾಲನೆ ನೀಡಿದರು.
ಅಪೌಷ್ಟಿಕತೆ ನಿವಾರಣೆ: ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಮತ್ತು ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಮತ್ತು ಅವರ ಆರೋಗ್ಯ ವೃದ್ಧಿಸಲು ಕ್ಷೀರಭಾಗ್ಯ ಉಪಯುಕ್ತ ಯೋಜನೆಯಾಗಿದೆ ಎಂದು ಹೇಳಿದರು.
ಈ ಯೋಜನೆ ಶಾಲಾ ಮಕ್ಕಳಿಗೆ ಮಾತ್ರವಲ್ಲ ಹೈನೋದ್ಯಮಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದ ಅವರು, ಈ ಹಿಂದಿನ ಸರ್ಕಾರಗಳು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ವಿಕಾಸಕ್ಕೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿವೆ. ಇದರೊಂದಿಗೆ ಶಿಕ್ಷಕರಿಗೆ ಕಾಲಕಾಲಕ್ಕೆ ಅಗತ್ಯವಿರುವ ತರಬೇತಿಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ಒದಗಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಸಂತಸದ ಸಂಗತಿ: ಇದೊಂದು ಸ್ಪರ್ಧಾಯುಗವಾಗಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳು ಉತ್ತಮ ಅಂಕ ಗಳಿಸುವುದನ್ನೇ ಗುರಿಯಾಗಿಸಿಕೊಂಡಿರುತ್ತಾರೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕೂಡ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಮಕ್ಕಳು ಓದಿನೊಂದಿಗೆ ಇತರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಸಹಕಾರಿಯಾಗಿರುವ ಈ ಯೋಜನೆಯ ಲಾಭವನ್ನು ಸಮಾಜದ ಎಲ್ಲಾ ಮಕ್ಕಳು ಪಡೆದುಕೊಳ್ಳುವಂತಾಗಲು ಪೋಷಕರೆಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದರು.
ಸಿಬ್ಬಂದಿ ಪಾತ್ರ ಮುಖ್ಯ: ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಎಲ್. ಜಗದೀಶ್ವರ್ ಮಾತನಾಡಿ, ರಾಜ್ಯ ಹಾಲು ಉತ್ಪಾದನಾ ಕೇಂದ್ರಗಳಲ್ಲಿ ಈಗಿರುವ ವ್ಯವಸ್ಥೆಯನ್ನು ಬಳಸಿಕೊಂಡು, ಶಾಲಾ ಮಕ್ಕಳಿಗೆ ಉತ್ತಮಗುಣಮಟ್ಟದ ಪೌಷ್ಟಿಕಾಂಶಯುಕ್ತ ಹಾಲಿನ ಪುಡಿಯನ್ನು ವಿತರಿಸಲು ಮುಂದಾಗಿರುವುದು ಹರ್ಷದ ಸಂಗತಿ. ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾತ್ರ ಪ್ರಮುಖವಾದುದಾಗಿದೆ ಎಂದರು.
ಪ್ರೇರಣೆ ನೀಡಿ: ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಮಾತನಾಡಿ, ಶಾಲಾ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಹಾಲು ವಿತರಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಮ್ಮೆ ನಮ್ಮದು. ಶಾಲೆಗಳಲ್ಲಿ ಹಾಲನ್ನು ವ್ಯವಸ್ಥಿತವಾಗಿ ಸಂಸ್ಕರಿಸಿ, ಸಕಾಲದಲ್ಲಿ ವಿತರಿಸಬೇಕು. ಅದಕ್ಕಾಗಿ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡುವ ಅಗತ್ಯವಿದೆ ಎಂದರಲ್ಲದೇ ಎಲ್ಲಾ ಮಕ್ಕಳಿಗೂ ಹಾಲು ಕುಡಿಯುವ ಅಭ್ಯಾಸ ಇರುವುದಿಲ್ಲ. ಆದ್ದರಿಂದ ಮಕ್ಕಳು ಪೌಷ್ಟಿಕಾಂಶಯುಕ್ತ ಹಾಲನ್ನು ಸೇವಿಸಲು ಪ್ರೇರಣೆ ನೀಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಸ್. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ದೇವಿಬಾಯಿ ಧರ್ಮಾನಾಯ್ಕ, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್. ಯಲ್ಲಪ್ಪ, ಸಿಇಒ ಸಸಿಕಾಂತ್ ಸೆಂಥಿಲ್, ಪಶುವೈದ್ಯ ಇಲಾಖೆಯ ಉಪನಿರ್ದೇಶಕ ಡಾ.ರವೀಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಶಿವಮೊಗ್ಗ ಸಹಕಾರ ಹಾಲು ಒಕ್ಕೂಟದ ನಿರ್ವಾಹಕ ನಿರ್ದೇಶಕ ವಿ.ಎಸ್. ಅಕ್ಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement