ಪ್ರವಾಸಿ ಕೇಂದ್ರವಾಗಿ ಲಿಂಗನಮಕ್ಕಿ ಜಲಾಶಯ
ಸಾಗರ: ಲಿಂಗನಮಕ್ಕಿ ಜಲಾಶಯಕ್ಕೆ ದಾಖಲೆ ಪ್ರಮಾಣದಲ್ಲಿ ನೀರು ಹರಿದುಬಂದು ಜಲಾಶಯದ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ಬೇಗ ಭರ್ತಿಯಾಗಿದೆ. ಈ ಸನ್ನಿವೇಶವನ್ನು ಬಳಸಿಕೊಂಡು ಜೋಗವನ್ನು ಅತ್ಯುತ್ತಮ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಲಿಂಗನಮಕ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ಬಾಗಿನ ಅರ್ಪಿಸಿ ಮಾತನಾಡಿ, ಜೋಗ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ ವೇಗ ನೀಡಲಾಗುವುದು. ಲಿಂಗನಮಕ್ಕಿ ಆಣೆಕಟ್ಟಿನ ಕೆಳಭಾಗದ 60 ಎಕರೆ ಪ್ರದೇಶದಲ್ಲಿ ಕೆಆರ್ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ, ಜಲಪಾತದಲ್ಲಿ ವರ್ಷದ ಎಲ್ಲ ದಿನವೂ ನೀರು ಹರಿಯುವಂತೆ ರೀಸೈಕಲಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಇದರ ಜತೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಸಿದ್ಧಪಡಿಸಲಾಗುವುದು ಎಂದರು.
ವಿದ್ಯುತ್ ಸಮಸ್ಯೆ ಉಂಟಾಗದು: ರಾಜ್ಯಕ್ಕೆ ಜಲವಿದ್ಯುತ್ ನೀಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದರಿಂದ ನಿರೀಕ್ಷೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡುವ ನಿರೀಕ್ಷೆ ಹೊಂದಿದ್ದು ಈ ವರ್ಷರಾಜ್ಯಕ್ಕೆ ವಿದ್ಯುತ್ ಸಮಸ್ಯೆ ಉಂಟಾಗದು. ಕಳೆದ ವರ್ಷ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದುದ್ದರಿಂದ ಸಮಸ್ಯೆ ಎದುರಿಸುವಂತಾಯಿತು. ಈ ಬಾರಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು ಎಲ್ಲ ಜಲಾಶಯಗಳು ಬಹುತೇಕ ಭರ್ತಿಯಾಗಿರುವುದರಿಂದ ಇತರೆ ರಾಜ್ಯಗಳ ಮೇಲಿನ ವಿದ್ಯುತ್ ಅವಲಂಬನೆ ಕಡಿಮೆಯಾಗಲಿದೆ ಎಂದರು.