ಅರಸು ಆದರ್ಶ ಸಾರ್ವಕಾಲಿಕ: ಕಿಮ್ಮನೆ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಆ.20
ಭೂಸುಧಾರಣಾ ಕಾಯ್ದೆ ಜಾರಿ ಮಾಡಲು ಹೊರಟಾಗ ಆಡಳಿತ ಪಕ್ಷದ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಆದರೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಲ್ಪವಾದರೂ ಭೂಮಿ ಹೊಂದಿರಬೇಕೆಂಬ ಆಶಯದಿಂದ ದೇವರಾಜ ಅರಸು ಅವರು ಭೂಸುಧಾರಣಾ ಕಾಯ್ದೆ ಜಾರಿಗೆ ತರುವ ಕ್ರಾಂತಿಕಾರಕ ನಿರ್ಣಯ ಕೈಗೊಂಡರು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿವಿಧ ನಿಗಮ ಮಂಡಳಿಗಳ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 98ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಆದರ್ಶ ಸರ್ವಕಾಲಿಕ ಎಂದ ರು.
ಇವತ್ತಿಗೂ ಮೀಸಲಾತಿ ಜಾರಿಗೆ ತರಲು ಉತ್ತರ ಭಾರತದ ಹಲವು ರಾಜ್ಯಗಳಿಗೆ ಸಾಧ್ಯವಾಗಿಲ್ಲ. ಆದರೆ ರಾಜ್ಯದಲ್ಲಿ ಅರಸು ಅವರು ಎಲ್.ಜಿ. ಹಾವನೂರು ಅವರ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತಂದು ಈ ವರ್ಗಗಳಿಗೆ ಶೇ.58ರಷ್ಟು ಮೀಸಲಾತಿ ಒದಗಿಸಿದರು ಎಂದರು.
ದೇಶಕ್ಕೆ ಮಾದರಿ: ವಿಧಾನಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮಾತನಾಡಿ, ದೇವರಾಜ ಅರಸುರವರ ಅಭಿವೃದ್ಧಿ ಕ್ರಾಂತಿ ದೇಶಕ್ಕೆ ಮಾದರಿಯಾಗಿದೆ ಎಂಬುದನ್ನು ಅವರ ವಿರೋಧಿಗಳು ಒಪ್ಪಿಕೊಂಡ ಸತ್ಯ ಎಂದರು.
ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ರಾಜ್ಯ ಸರ್ಕಾರವು ಸಾಮಾಜಿಕ, ಆರ್ಥಿಕ ಗಣತಿ ಮಾಡಲು ಹೊರಟಿದೆ. ಈ ಮೂಲಕ ಸಾಮಾಜಿಕ ನ್ಯಾಯ ಕೊಡಲು ಹೊರಟಿದೆ. ಹೆಚ್ಚು ಸಂಖ್ಯೆಯಲ್ಲಿದ್ದವರಿಗೆ ಹೆಚ್ಚು ನ್ಯಾಯ ಎಂದು ಸರ್ಕಾರವೇನಾದರೂ ತೀರ್ಮಾನಿಸಿದರೆ ಅದು ಅರಸು ಅವರ ಆಶಯಕ್ಕೆ ವಿರುದ್ಧ. ಈ ದಿಕ್ಕಿನಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದರು.
ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಡಿ.ಎಸ್. ಯಲ್ಲಪ್ಪ, ತಾ.ಪಂ. ಅಧ್ಯಕ್ಷೆ ದೇವೀಬಾಯಿ ಧರ್ಮಾನಾಯ್ಕ, ಮಾಜಿ ಶಾಸಕರಾದ ಚಂದ್ರಶೇಖರ್, ಮಾದಪ್ಪ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಜೀಬುಲ್ಲಾ ಖಾನ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ. ಮಂಜುನಾಥ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಜಮತ್ತುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಪ್ರೋತ್ಸಾಹ ಧನ: ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿದ್ದು, ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ವಿವಿಧ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಕುವೆಂಪು ವಿವಿ ಸಹಾಯಕ ಪ್ರಾಧ್ಯಾಪಕ ಡಾ. ನೆಲ್ಲಿಕಟ್ಟ ಎಸ್. ಸಿದ್ದೇಶ್ ಅವರು ಡಿ. ದೇವರಾಜ ಅರಸು ಅವರ ಜೀವನ ಚರಿತ್ರೆ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೆ ಮುನ್ನ ಡಿ. ದೇವರಾಜ ಅರಸುರವರು ಭಾವಚಿತ್ರವನ್ನು ಡಾ. ಅಂಬೇಡ್ಕರ್ ಭವನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ನಗರದ ನೆಹರೂ ರಸ್ತೆ, ಬಾಲರಾಜ ಅರಸ್ ರಸ್ತೆ ಮೂಲಕ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ಮೂಲಕ ತರಲಾಯಿತು.