ಅರ್ಜಿ ಆಹ್ವಾನ
ಶಿವಮೊಗ್ಗ: ಗಾಜನೂರಿನ ಜವಾಹರ ನವೋದಯ ವಿದ್ಯಾಲಯವು 2014-15ನೇ ಸಾಲಿನ 6ನೇ ತರಗತಿಗೆ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ವಸತಿಶಾಲೆ ಇದಾಗಿದ್ದು, ಆಯ್ಕೆಯಾದ ಮಕ್ಕಳಿಗೆ 6ನೇ ತರಗತಿಯಿಂದ ಹನ್ನೆರಡನೇ ತರಗತಿಯವರೆಗೆ ಉಚಿತ ಗುಣಮಟ್ಟದ ಶಿಕ್ಷಣ ಒದಗಿಸಲಾಗುವುದು. ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವವರಾಗಿರಬೇಕು. 2001ರ ಮೇ ಯಿಂದ 2005ರ ಏಪ್ರಿಲ್ ಮಾಹೆಯೊಳಗೆ ಜನಿಸಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಅಂಗವಿಕಲರು ಹಾಗೂ ಬಡತನ ರೇಖೆಗಿಂತ ಕಡಿಮೆ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ವಿದ್ಯಾರ್ಥಿಗಳು ಮಾಹೆಯಾನ 200 ರು. ಶುಲ್ಕ ಪಾವತಿಸಬೇಕು. ಅರ್ಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯೋಪಾಧ್ಯಾಯರ ಮೂಲಕ ಸಂಬಂಧಪಟ್ಟ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಅಕ್ಟೋಬರ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು.
ನಿಗದಿತ ನಮೂನೆಯ ಅರ್ಜಿ ಮತ್ತು ವಿವರಣಾ ಪತ್ರವನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಆಯಾ ತಾಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅಥವಾ 5ನೇ ತರಗತಿಯಲ್ಲಿನ ಶಾಲೆಯ ಮುಖ್ಯೋಪಾಧ್ಯಾಯರಿಂದ ಅಥವಾ ವಿದ್ಯಾಲಯದ ಪ್ರಾಂಶುಪಾಲರಿಂದ ಉಚಿತವಾಗಿ ಪಡೆದುಕೊಳ್ಳಬಹುದು.