ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್: ಖಂಡನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.25
ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಮುಜರಾಯಿ ಇಲಾಖೆ ದೇವಸ್ಥಾನಗಳ ವ್ಯವಸ್ಥಾಪನಾ ಮಂಡಳಿ ರದ್ಧತಿ ಕುರಿತು ಸರ್ಕಾರ ಕೂಡಲೇ ತನ್ನ ನಿಲುವನ್ನು ಪರಿಷ್ಕರಿಸಿ ತೀರ್ಮಾನ ಕೈಗೊಳ್ಳದಿದ್ದರೆ ಆ.28ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಹಾಗೂ ಜನಜಾಗೃತಿ ಹಮ್ಮಿಕೊಳ್ಳುವುದಾಗಿ ರಾಜ್ಯ ಬಿಜೆಪಿ ಎಚ್ಚರಿಸಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಶೀಲಿಸಿ ಬಿಜೆಪಿ ಸರ್ಕಾರ ರಾಜ್ಯಪಾಲರ ಅಂಗೀಕಾರಕ್ಕೆ ಕಳುಹಿಸಿತ್ತು. ಆದರೆ, ರಾಜ್ಯಪಾಲರು ಅಂಗೀಕಾರ ಮಾಡಿರಲಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರವು ಕಾಯ್ದೆ ಜಾರಿಗೆ ತಡೆಯಾಜ್ಞೆ ತಂದಿರುವುದು ಸರಿಯಲ್ಲ ಎಂದು ದೂರಿದರು.
ಗಾಂಧಿಜೀಯಾದಿಯಾಗಿ ಗೋವನ್ನು ಎಲ್ಲರೂ ಪೂಜ್ಯ ಭಾವನೆಯಿಂದ ಕಂಡಿದ್ದರು. ಅಲ್ಲದೇ ಕೃಷಿ ಹಾಗೂ ಭಾರತೀಯ ಅರ್ಥವ್ಯವಸ್ಥೆಯಲ್ಲಿ ಗೋವಿನ ಪಾತ್ರ ಬಹಳ ಪ್ರಮುಖವಾಗಿದೆ. ಇದೀಗ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯವನ್ನು ಓಲೈಸಲು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ತಡೆಯಾಜ್ಞೆ ತಂದಿರುವುದು ಸರಿಯಲ್ಲ. ಸರ್ಕಾರ ಈ ಕೂಡಲೇ ಕಾಯ್ದೆ ಜಾರಿಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಒಲೈಕೆ ರಾಜಕೀಯ: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಗೃಹ ಸಚಿವರು ಹೇಳಿಕೆಯೊಂದನ್ನು ನೀಡಿದ್ದು, ಜೈಲಿನಲ್ಲಿರುವ ಅಲ್ಪಸಂಖ್ಯಾತ ಮುಸ್ಲಿಂ ಯುವಕರಿಗೆ ಕಾನೂನು ನೆರವು ನೀಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ. ಜೈಲಿನಲ್ಲಿ ಅಲ್ಪಸಂಖ್ಯಾತರು ಮಾತ್ರ ಇದ್ದಾರೆಯೇ ಬೇರೆ ಧರ್ಮದವರು ಇಲ್ಲವೇ ಅವರಿಗೆ ಮಾತ್ರ ಕಾನೂನು ನೆರವು ಏಕೆ ಇದು ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಒಲೈಸಲು ಹೂಡಿರುವ ತಂತ್ರ ಎಂದು ಆರೋಪಿಸಿದರು.
ದೇವಸ್ಥಾನಗಳ ಸಮಿತಿ ರದ್ದು: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ 35 ಸಾವಿರ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ಅಸ್ತಿತ್ವತ್ವಕ್ಕೆ ತಂದಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅವುಗಳಲ್ಲಿ 41 ದೇವಸ್ಥಾನಗಳ ಸಮಿತಿಯನ್ನು ರದ್ದು ಮಾಡಿದೆ. ಅಲ್ಲದೇ, ಉಳಿದ ದೇವಸ್ಥಾನಗಳ ಸಮಿತಿಯನ್ನು ರದ್ದು ಮಾಡಲು ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ಸರ್ಕಾರ ಕೂಡಲೇ ಚರ್ಚಿಸಿ ತೀರ್ಮಾನಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಹೊಸ ತಾಲೂಕು ರಚನೆ ಮಾಡಲು ಕ್ರಿಯಾ ಯೋಜನೆ ಸಿದ್ದಗೊಳಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಇದನ್ನು ತಿರಸ್ಕರಿಸಿದೆ. ಅಲ್ಲದೇ ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರು ಹಾಗೂ ಕುಲಸಚಿವರನ್ನು ಬದಲಿಸುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.