ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸರ್ಕಾರದ ದರ ತಿರಸ್ಕಾರ

Lingaraj Badiger
Updated On : 3 Dec 2013, 10:40 am

ಶಿವಮೊಗ್ಗ: ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ 2,650 ನಿಗದಿಪಡಿಸಿರುವುದನ್ನು ರಾಜ್ಯ ರೈತ ಸಂಘವು ತಿರಸ್ಕರಿಸಿದ್ದು, ಉತ್ಪಾದನೆ ಆಧಾರದ ಮೇಲೆ 2,650 ರಿಂದ 3,350 ವರೆಗೆ ನಿಗದಿಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರೈತರ ಮನವಿಗೆ ಸ್ಪಂದಿಸದಿದ್ದರೆ ಡಿ.4ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ರೈತಸಂಘವು ಕಬ್ಬು, ಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದೆ. ರೈತನ ಆತ್ಮಹತ್ಯೆ ಹಿನ್ನಲೆಯಲ್ಲಿ 150 ಹೆಚ್ಚುವರಿ ಬೆಂಬಲ ಬೆಲೆಯನ್ನು ಸರ್ಕಾರ ಘೋಷಿಸಿದೆಯೇ ವಿನಾ ರೈತರ ಮೇಲಿನ ಕಾಳಜಿಯಿಂದಲ್ಲ ಎಂದು ಟೀಕಿಸಿದರು.
ಬಿಜೆಪಿ, ಕಾಂಗ್ರೆಸ್, ಕೆಜೆಪಿ ಶಾಸಕರದ್ದೇ ಸಕ್ಕರೆ ಕಾರ್ಖಾನೆಗಳಿದ್ದು, ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ.
ಸಕ್ಕರೆ ಕಾರ್ಖಾನೆಗಳು ರಾಜ್ಯದ ಭೂಮಿ, ನೀರು ಹಾಗೂ ಸಂಪನ್ಮೂಲವನ್ನು ಬಳಸಿಕೊಂಡು ಕಾರ್ಖಾನೆಯನ್ನು ಸ್ಥಾಪಿಸಿವೆ. ಆದರೆ ಇಂದು ಈ ಕಾರ್ಖಾನೆಗಳ ಮಾಲೀಕರು ರಾಜ್ಯ ಸರ್ಕಾರದ ವಿರುದ್ಧವೇ ಪ್ರತಿಭಟಿಸುವ ಹಂತ ತಲುಪಿದ್ದಾರೆ. ಸಕ್ಕರೆ ಕಾರ್ಖಾನೆಗಳು ರಾಜ್ಯ ಸರ್ಕಾರದ ಆದೇಶ ಪಾಲಿಸದಿದ್ದಲ್ಲಿ ರಾಜ್ಯ ಸರ್ಕಾರದೊಂದಿಗೆ ಸೇರಿ ರೈತರು ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಹಿಂಜರಿಯುವುದಿಲ್ಲ ಎಂದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸಕ್ಕರೆ ಕಾರ್ಖಾನೆಗಳು ಇದ್ದರೆಷ್ಟು ಬಿಟ್ಟರೆಷ್ಟು. ಅವುಗಳನ್ನು ರಾಷ್ಟ್ರೀಕರಣ ಮಾಡುವುದೇ ಒಳ್ಳೆಯದು ಎಂದು ಕಿಡಿಕಾರಿದರು.
ಭತ್ತವನ್ನು ಬೆಂಬಲ ಬೆಲೆ ನೀಡಿ ಖರೀದಿಸಲು ಗರಿಷ್ಠ 25 ಕ್ವಿಂಟಾಲ್ ನಿಗದಿ ನಿಯಮವನ್ನು ಹಿಂತೆಗೆದುಕೊಳ್ಳಬೇಕು. ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ಬಾದಿತರಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಸುವರ್ಣ ಸೌಧದ ಬಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದ ಅವರು, ಪಿಎಲ್‌ಡಿ ಬ್ಯಾಂಕ್‌ಗಳು ಸಾಲ ಮರುಪಾವತಿಸದ ರೈತನ್ನು ಜೈಲಿಗಟ್ಟಲು ಹೊರಟಿವೆ. ಈ ವಿಷಯವಾಗಿ ಸರ್ಕಾರ ಕೂಡಲೇ ಪಿಎಲ್ ಡಿ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಕಡಿದಾಳು ಶಾಮಣ್ಣ, ಹಿಟ್ಟೂರು ರಾಜು, ಕೆ. ರಾಘವೇಂದ್ರ, ಇ.ಬಿ. ಜಗದೀಶ್, ಡಾ. ಪುಟ್ಟಸ್ವಾಮಿ, ಎಸ್. ಶಿವಮೂರ್ತಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement