ಬಿಜೆಪಿ ಗೆಲವು: ನಗರದಲ್ಲಿ ವಿಜಯೋತ್ಸವ
ಕ.ಪ್ರ.ವಾರ್ತೆ ಶಿವಮೊಗ್ಗ ಡಿ. 8
ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿತು.
ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು, ಜಯಘೋಷ ಮೊಳಗಿಸಿದರು. ವಿಜಯೋತ್ಸವ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಗಿರೀಶ್ ಪಟೇಲ್, ಜನರ ನಿರೀಕ್ಷೆಗೆ ತಕ್ಕಂತೆ ಕೇಂದ್ರ ಸರ್ಕಾರ ದೇಶದಲ್ಲಿ ಆಡಳಿತ ನಡೆಸಲಿಲ್ಲ. ಕೇವಲ ಭ್ರಷ್ಟಾಚಾರ ಮಾಡುವ ಮೂಲಕ ಮತ್ತೊಬ್ಬರನ್ನು ಟೀಕೆಯಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಉತ್ತರ ಭಾರತದ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಆಯಾ ರಾಜ್ಯಗಳಲ್ಲಿನ ಆಡಳಿತ ಜನ ಮರೆತಿಲ್ಲ. ಕಾಂಗ್ರೆಸ್ ಸರ್ಕಾರದ ಆಡಳಿತ ನೋಡಿ ಬೇಸತ್ತು ಜನ ಬಿಜೆಪಿ ಕಡೆ ಮುಖ ಮಾಡಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದೆಹಲಿಯಲ್ಲಿ ಬಿಜೆಪಿ ಅಲೆ ಎದ್ದಿದೆ. ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶ ಮತದಾರರು ನೀಡಿದ್ದು, ಪಕ್ಷ ಅವರಿಗೆ ಕೃತಜ್ಞವಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಾಗುವುದು ಎಂದು ಹೇಳಿದರು.
ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಅಲೆ ಇದೆ ಎಂಬುದಕ್ಕೆ ಈ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಲ್ಲಿಯೂ ಮತದಾರರು ಬಿಜೆಪಿಯ ಕೈಹಿಡಿಯಲಿರುವುದು ಸ್ಪಷ್ಟವಾಗಿದೆ ಎಂದರು.
ಬಹುತೇಕ ದೇಶದ ಎಲ್ಲಾ ರಾಜ್ಯಗಳಲ್ಲಿ ಮೋದಿ ಪ್ರಚಾರ ಮಾಡಿದ್ದಾರೆ. ಅವರನ್ನು ಮತದಾರರು ಮೆಚ್ಚಿದ್ದಾರೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಬೇಕಿಲ್ಲ. ಈ ಗೆಲುವನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ಕಾರ್ಯಕರ್ತರು ಇನ್ನಷ್ಟು ಹೆಚ್ಚಿನ ಕೆಲಸ ಮಾಡಬೇಕು. ಮುಖಂಡರು ಕೂಡ ಅವರಿಗೆ ಉತ್ತೇಜನ ನೀಡುವುದರ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆಲವು ಸಾಧಿಸಲು ಶ್ರಮಿಸಬೇಕು ಎಂದ ಅವರು, ದೇಶದಲ್ಲಿ ಮೋದಿ ಅಲೆ ಏನಿಲ್ಲ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ನಾಯಕರಿಗೆ ಈ ಚುನಾವಣೆ ಒಂದು ಉತ್ತಮ ಪಾಠ ಎಂದು ತಿಳಿಸಿದರು.
ಈ ವೇಳೆ ನಗರ ಯುವ ಮೋರ್ಚಾ ಅಧ್ಯಕ್ಷ ಹಿರಣ್ಣಯ್ಯ, ನಗರಸಭೆ ಮಾಜಿ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಅಣ್ಣಪ್ಪ, ನಗರ ಘಟಕದ ಅಧ್ಯಕ್ಷ ಜ್ಞಾನೇಶ್ವರ, ಎಸ್.ರಾಮು, ನಾಗರಾಜ್ ಮತ್ತಿತರರು ಇದ್ದರು.