ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ
ಕ.ಪ್ರ.ವಾರ್ತೆ ಶಿವಮೊಗ್ಗ ಡಿ.10
ಮಾನವ ಹಕ್ಕುಗಳು ಜನ್ಮದತ್ತವಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲಿ ಸಮ್ಮಿಳಿತವಾಗಿದೆ. ಆದ್ದರಿಂದ ಅದನ್ನು ರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಚ್.ಎಂ. ನಂಜುಂಡಸ್ವಾಮಿ ಪ್ರತಿಪಾದಿಸಿದರು.
ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಕ್ಕು ಉಲ್ಲಂಘನೆ ದುರಂತ: ಮಾನವ ಹಕ್ಕುಗಳ ಕುರಿತಂತೆ ಸಂವಿಧಾನದ 21ನೇ ಪರಿಚ್ಚೇದವನ್ನು ಉದಾಹರಣೆ ಸಹಿತ ವಿಶ್ಲೇಷಿಸಿದ ಅವರು, ದುರ್ಬಲರ ರಕ್ಷಣೆಯೇ ಒಗ್ಗಟ್ಟಿನ ಮಂತ್ರವಾಗಬೇಕು ಎಂಬ ಉದ್ದೇಶದಿಂದ ಸಂವಿಧಾನದಲ್ಲಿ ಜೀವಿತ ರಕ್ಷಣೆಯ ಹಕ್ಕನ್ನು ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸ್ವತಂತ್ರವಾಗಿ ಬದುಕಲು ಅವಕಾಶ ನೀಡಲಾಗಿದೆ. ಆದರೆ, ಬಹುತೇಕ ಕಡೆಗಳಲ್ಲಿ ಕೆಲವು ಖಾಸಗೀ ಬದುಕಿನ ಮೇಲೆ ಪ್ರಭಾವ ಬೀರುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ದುರಂತ ಎಂದು ಆತಂಕವ್ಯಕ್ತಪಡಿಸಿದರು.
ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರ ಖಾಸಗೀ ಬದುಕಿನ ಹಕ್ಕುಗಳನ್ನು ಮಾನವ ಹಕ್ಕು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ ಖಾಸಗೀ ಬದುಕಿನ ಹಕ್ಕುನ್ನೂ ಕೂಡ ರಕ್ಷಣೆ ಮಾಡಬೇಕಿದೆ ಎಂದರು.
ಭಾವನೆಗೆ ಧಕ್ಕೆಯಾಗಬಾರದು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ. ರವಿ ಎಂ.ನಾಯಕ್ ಮಾತನಾಡಿ, ಬೇರೆಯವರ ಭಾವನೆಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದೇ ಮಾನವ ಹಕ್ಕುಗಳ ರಕ್ಷಣೆ. ಪ್ರತಿಯೊಬ್ಬರ ಹಕ್ಕುಗಳನ್ನು ಗೌರವಿಸುವುದು ಮಾನವೀಯ ಗುಣಗಳನ್ನು ಎತ್ತಿಹಿಡಿದಂತೆ ಎಂದರು.
ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಡಿ. ದಯಾಳು, ವಕೀಲರ ಸಂಘದ ಅಧ್ಯಕ್ಷ ಅಶೋಕ್
ಭಟ್, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ರವೀಂದ್ರನಾಥ್, ಮಾನವಹಕ್ಕುಗಳ ರಕ್ಷಣಾ ಸಮಿತಿ ಅಧ್ಯಕ್ಷ ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ವಿಶೇಷ ಭೂಸ್ವಾಧೀನಾಧಿಕಾರಿ ಶ್ರೀಧರ್, ತಹಶೀಲ್ದಾರ್ ಕೊಟ್ರೇಶ್ ಮತ್ತಿತರರು ಇದ್ದರು.