ಬತ್ತಕ್ಕೆ ಕಂದುಜಿಗಿ ಹುಳು ಬಾಧೆ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಜಡೆ ಮತ್ತು ಕಸಬ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಬತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ ಕಾಣಿಸಿಕೊಂಡಿದೆ. ಈ ಬಾಧೆಯು ಜಿಲ್ಲೆಯ ಇತರೆ ಬತ್ತ ಬೆಳೆಯುವ ತಾಲೂಕುಗಳಲ್ಲಿಯೂ ಸಹ ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಕೃಷಿ ಇಲಾಖೆ ತಿಳಿಸಿದೆ.
ಹತೋಟಿ ಕ್ರಮಗಳು: ಕಂದುಜಿಗಿ ಹುಳುವಿನ ಹತೋಟಿಗಾಗಿ ಮಾನೋಕ್ರೊಟೋಫಾಸ್ 32 ಎಸ್.ಎಲ್. ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಕ್ಲೋರೋಪೈರಿಫಾಸ್ 20 ಇಸಿ ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ 0.6 ಮಿಲಿ ಪ್ರತಿ ಲೀಟರ್ ನೀರಿಗೆ ಅಥವಾ ಬುಫ್ರೊಫೆಜಿನ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಬೆರೆಸಿ ಗಿಡದ ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು. ಎಕರೆಗೆ 300-350 ಲೀಟರ್ ಸಿಂಪರಣಾ ದ್ರಾವಣ ಬೇಕಾಗುತ್ತದೆ. ತೆನೆ ಬರುವ ಮೊದಲು ಇದರ ಬಾಧೆ ಕಂಡು ಬಂದಲ್ಲಿ ಎಕರೆಗೆ 5 ಕೆ.ಜಿ. ಫೋರೇಟ್ ಅಥವಾ 8 ಕೆ.ಜಿ ಕಾರ್ಬೋಫ್ಯೂರಾನ್ ಹರಳನ್ನು ಬಳಸಿರಿ.
ಎಚ್ಚರಿಕೆ ಕ್ರಮಗಳು: ಸಿಂಪರಣೆ ಮಾಡುವಾಗ ಗದ್ದೆಯಲ್ಲಿನ ನೀರನ್ನು ಸಂಪೂರ್ಣವಾಗಿ ಬಸಿದು ಹೊರ ತೆಗೆಯಬೇಕು. ಗದ್ದೆಯಿಂದ ಗದ್ದೆಗೆ ನೀರು ಹಾಯಿಸಬಾರದು. ಮತ್ತು ಯೂರಿಯಾ ರಸಗೊಬ್ಬರ ಬಳಸಬಾರದು. ಯಾವುದೇ ಕಾರಣಕ್ಕೂ ಬಾಧೆಗೊಳಗಾದ ಬತ್ತದ ಬೆಳೆಗೆ ಮಿಥೈಲ್ ಪ್ಯಾರಾಥಿಯಾನ್ ಅಥವಾ ಸಿಂಥೆಟಿಕ್ ಪೈರಿಥ್ರಾಯ್ಡ್ ರಾಸಾಯನಿಕಗಳನ್ನು ಬಳಸಬಾರದು.
ಮಾಹಿತಿಗಾಗಿ ತಾ. ಸಹಾಯಕ ಕೃಷಿ ನಿರ್ದೇಶಕ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವಂತೆ ಜಂಟಿ ಕೃಷಿ ನಿರ್ದೇಶಕ ಕೆ. ಮಧುಸೂದನ್ ತಿಳಿಸಿದ್ದಾರೆ.