ಮರಳು ಸಾಗಣೆಗೆ ಅನುಮತಿ ನೀಡಲು ಆಗ್ರಹ
ಕ.ಪ್ರ. ವಾರ್ತೆ, ಶಿವಮೊಗ್ಗ, ಡಿ.16
ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಶಿವಮೊಗ್ಗ ಕಟ್ಟಡ ಸಾಮಗ್ರಿ ಸರಬರಾಜು ಲಾರಿ ಮಾಲೀಕರ ಸಂಘದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದುವರೆಗೆ ಮರಳು ಸಾಗಾಣಿಕೆಗೆ ಅನುಮತಿ ನೀಡಲಾಗಿತ್ತಾದರೂ ಕಳೆದ ಕೆಲವು ದಿನಗಳಿಂದ ಅನುಮತಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಜಿಲ್ಲೆಯ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೆ ನಡೆಯುತ್ತಿದೆ.
ಇಂದಿನಿಂದ ಮರಳು ಸಾಗಣಿಕೆಗೆ ಅನುಮತಿ ನೀಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಸಂಬಂಧಿಸಿದ ಅಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅಕ್ರಮ ಮರಳು ಸಾಗಣಿಕೆಗೆ ಅಧಿಕಾರಿಗಳೇ ಸಹಕಾರ ನೀಡುತ್ತಿದ್ದಾರೆ. ಅಕ್ರಮ ಮರಳು ಸಾಗಾಣಿಕೆದಾರರು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೊಸ ಮರಳು ನೀತಿ ಬರುತ್ತದೆ ಎಂದು ಅಧಿಕಾರಿಗಳು ಮರಳು ಸಾಗಣಿಕೆಗೆ ಪರ್ಮಿಟ್ ನೀಡುತ್ತಿಲ್ಲ.
ಈ ಬಗ್ಗೆ ಹಲವು ಬಾರಿ ಹೋರಾಟ ಮಾಡಿದರೂ ಪರಿಹಾರ ಸಿಕ್ಕಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಕೂಡಲೇ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮರಳು ಸಾಗಾಣಿಕೆಗೆ ಅನುಮತಿ ನೀಡುವಂತೆ ಆದೇಶ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಡಿ. ರಾಜಶೇಖರ್ ಮತ್ತಿತರರು ಇದ್ದರು.