ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಿಇಟಿ ಕಾಯ್ದೆ ವಿರೋಧಿಸಿ ರಸ್ತೆ ತಡೆ, ಧರಣಿ

Lingaraj Badiger
Updated On : 19 Dec 2013, 11:25 am

ಕ.ಪ್ರ.ವಾರ್ತೆ, ಶಿವಮೊಗ್ಗ,  ಡಿ.18
ವೃತ್ತಿ ಶಿಕ್ಷಣ (ಸಿಇಟಿ) ಪ್ರವೇಶಕ್ಕೆ ಸಂಬಂಧಿಸಿದಂತೆ 2006ರ ಕಾಯ್ದೆ ಅನುಷ್ಠಾನ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಎನ್‌ಎಸ್‌ಯುಐ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತ್ಯೇಕ ಹೋರಾಟ ನಡೆಸಲಾಯಿತು.
ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಜಮಾವಣೆಗೊಂಡು ರಸ್ತೆ ತಡೆ ನಡೆಸಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಎನ್‌ಎಸ್‌ಯುಐ ನೇತೃತ್ವದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆ ಕುಳಿತು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಎರಡೂ ಸಂಘಟನೆಯ ಪ್ರಮುಖರು ಜಿಲ್ಲಾಡಳಿತದ ಮೂಲಕ ಸರ್ಕಾರವನ್ನು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದವು.
ಎಬಿವಿಪಿ ಆಗ್ರಹ: ಬಡ- ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೃತ್ತಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರದೊಂದಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಲು ನಿರ್ಧರಿಸಿರುವ 2006ರ ಸಿಇಟಿ ಕಾಯ್ದೆಯನ್ನು ವಿರೋಧಿಸುವುದಾಗಿ ತಿಳಿಸಿರುವ ಎಬಿವಿಪಿ, ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗುವ ಮತ್ತು ಅವರ ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ಈ ನೀತಿ ವಿದ್ಯಾರ್ಥಿ ಹಾಗೂ ಶೈಕ್ಷಣಿಕ ವಿರೋಧಿ ನೀತಿಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಸರ್ಕಾರವು ಜಾರಿಗೊಳಿಸಲು ಹೊರಟಿರುವ ಈ ಕಾಯ್ದೆಯಿಂದಾಗಿ ಪ್ರಸ್ತುತ ಸರ್ಕಾರಿ ಕೋಟಾದಲ್ಲಿದ್ದ ಎಂಜಿನಿಯರಿಂಗ್ ಸೀಟುಗಳಲ್ಲಿ ಶೇ.45ರಷ್ಟು, ಮೆಡಿಕಲ್‌ನಲ್ಲಿ ಶೇ.40, ದಂತ ವೈದ್ಯಕೀಯ ಶೇ.35ರ ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಲಿವೆ. ಯಾವುದೇ ಖಾಸಗಿ ಅನುದಾನ ರಹಿತ ಕಾಲೇಜಿನಲ್ಲಿ ಒಂದೂ ಸರ್ಕಾರಿ ಕೋಟಾದ ಸೀಟುಗಳು ಇಲ್ಲದಂತಾಗಲಿದೆ. ಇದರಿಂದ ಬಡ ವಿದ್ಯಾರ್ಥಿಗಳ ಪ್ರವೇಶ ಕಷ್ಟಕರವಾಗಲಿದೆ ಎಂದರು.
ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳು ಸೇರಿ ಒಟ್ಟು 21 ಎಂಜಿನಿಯರಿಂಗ್ ಮತ್ತು 10 ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಸರ್ಕಾರದ ಸಿಇಟಿ ಪರೀಕ್ಷೆ ನಡೆಯುತ್ತದೆ, ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಮೆಡ್ ಕೆ ನಡೆಸುವ ಪರೀಕ್ಷೆ ಬರೆಯಬೇಕಾಗುತ್ತದೆ.
ಸಿಇಟಿಯಲ್ಲಿ ಮೊದಲ ರ್ಯಾಂಕ್ ಪಡೆದ ವಿದ್ಯಾರ್ಥಿಯೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಪಡೆಯಲು ಅನಿವಾರ್ಯವಾಗಿ ಲಕ್ಷಾಂತರ ರುಪಾಯಿ ಶುಲ್ಕ ಭರಿಸಬೇಕಾಗುತ್ತದೆ. ಯಾವುದೇ ಅನುದಾನದ ರಹಿತ ಕಾಲೇಜುಗಳ ಶುಲ್ಕ ನೀತಿ ಮತ್ತು ಸೀಟು ಹಂಚಿಕೆಯಲ್ಲಿ ಸರ್ಕಾರದ ನಿಯಂತ್ರಣಕ್ಕೆ ಒಳಪಡುವುದಿಲ್ಲ. ಹೀಗಾಗಿ 2006 ಕಾಯ್ದೆ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ ಎಂದು ಎಬಿವಿಪಿ ಮುಖಂಡರು ತಿಳಿಸಿದರು.
ಸಂಘಟನೆಯ ಮುಖಂಡರಾದ ದರ್ಶನ್, ಚರಣ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಎನ್‌ಎಸ್‌ಯು ಮನವಿ: ರಾಜ್ಯ ಸರ್ಕಾರವು ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಯ ಕಾಯ್ದೆ 2006ರನ್ನು ಆತುರಾತುರವಾಗಿ ಅನುಷ್ಠಾನಗೊಳಿಸಲು ಹೊರಟಿರುವ ಕ್ರಮವನ್ನು ಖಂಡಿಸುವುದಾಗಿ ಎನ್‌ಎಸ್‌ಯುಐ ತಿಳಿಸಿದೆ.
2006ರಲ್ಲಿ ಅಸ್ತಿತ್ವದಲ್ಲಿದ್ದ ಸರ್ಕಾರವು ಖಾಸಗಿ ಕಾಲೇಜುಗಳ ಒತ್ತಡಕ್ಕೆ ಮಣಿದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾರಕವಾಗುವಂತಹ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆ ರೂಪಿಸಿತ್ತು. ಕಾರಣಾಂತರಗಳಿಂದ ಆ ಕಾಯ್ದೆ ಜಾರಿಗೆ ಬಂದಿರಲಿಲ್ಲ. ಈ ಕಾಯ್ದೆ ರೂಪಿಸಲು ಅಂದಿನ ಸರ್ಕಾರ ಸುಪ್ರಿಂ ಕೋರ್ಟ್ ಆದೇಶ ಮುಂದಿಟ್ಟುಕೊಂಡಿತ್ತು. ಆದರೆ, ಪ್ರಸ್ತುತ ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಮತ್ತೆ ಆತುರಾತುರವಾಗಿ ಅನುಷ್ಠಾನಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಈ ಕಾಯ್ದೆಯಿಂದಾಗಿ ರಾಜ್ಯದಲ್ಲಿರುವ ಅತಿ ಹೆಚ್ಚು ವೃತ್ತಿ ಶಿಕ್ಷಣ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯವರಿಗೆ ವರದಾನವಾಗಲಿದೆ. ಹಾಗೆಯೇ ಸರ್ಕಾರಿ ಸಿಇಟಿಗೆ ಕಿಮ್ಮತ್ತಿನ ಬೆಲೆಯೂ ಇಲ್ಲದಂತಾಗುತ್ತದೆ. ಕೇವಲ ಶ್ರೀಮಂತ ವರ್ಗದವರು ಮಾತ್ರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಮಾಡುವಂತಹ ಸ್ಥಿತಿ ನಿರ್ಮಾಣವಾಗಲಿದೆ. ವೃತ್ತಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಹಿಡಿತಕ್ಕೆ ಸಿಗುವುದೇ ಇಲ್ಲ. ಬಡ ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿದ್ದರೂ ವೃತ್ತಿ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಮೊಯ್ಲಿ ಸರ್ಕಾರದ ಅವಧಿಯಲ್ಲಿ ವೃತ್ತಿ ಶಿಕ್ಷಣಕ್ಕೆ ಸಿಇಟಿ ಜಾರಿಗೆ ತರುವ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಟ್ಟು ವಿದ್ಯಾರ್ಥಿಪರ ಎಂಬಂತಾಗಿತ್ತು. ಆದರೆ, ಈಗಿನ ಸರ್ಕಾರ ಮಾರಕ ಕಾಯ್ದೆ ಅನುಷ್ಠಾನಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಸಂಘಟನೆ ತಿಳಿಸಿದೆ.
ಮುಖಂಡರಾದ ಸಿ.ಜಿ. ಮಧುಸೂಧನ್, ಕೆ. ಚೇತನ್, ಶ್ರೀಜಿತ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement