ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Vishwanath S
Updated On : 27 Dec 2013, 12:44 pm

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ಡಿ.26
ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಮಾದಿಗ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಯವರ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿಬಂದ ಮಾದಿಗ ಸಮುದಾಯದವರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿ ಆಗ್ರಹಿಸಿ, ಜನರ ಗಮನ ಸೆಳೆದರು.
ರಾಜ್ಯದ 101 ಪರಿಶಿಷ್ಟ ಜಾತಿಗಳಲ್ಲಿ ಮಾದಿಗರದ್ದು ಬಹಳ ದೊಡ್ಡ ಸಂಖ್ಯೆ ಇದೆ. ಆದರೆ, ಮೀಸಲಾತಿ, ನೌಕರಿ, ಸವಲತ್ತುಗಳ ಹಂಚಿಕೆಯಲ್ಲಿ ನ್ಯಾಯ ಸಿಗುತ್ತಿಲ್ಲ. ಈ ಬಗ್ಗೆ ಹೋರಾಟ ಮಾಡುತ್ತಲೇ ಬಂದಿದ್ದು, ಸರ್ಕಾರ ನ್ಯಾಯಮೂರ್ತಿ ಸದಾಶಿವ ಆಯೋಗ ನೇಮಿಸಿತ್ತು. ಈ ಆಯೋಗ ರಾಜ್ಯದಲ್ಲಿ ಸರ್ವೆ ಮಾಡಿ ಸರ್ಕಾರಿ ಸವಲತ್ತುಗಳ ಹಂಚಿಕೆ ಬಗ್ಗೆ ಪರಿಶಿಲನೆ ಮಾಡಿ ಅಂತಿಮ ವರದಿ ಸಲ್ಲಿಸಿದೆ. ಈ ವರದಿ ಸಲ್ಲಿಸಿ ಎರಡು ವರ್ಷ ಕಳೆದರೂ ಜಾರಿಗೊಳಿಸಿಲ್ಲವೆಂದು ಪ್ರತಿಭಟನಾಕಾರರು ದೂರಿದರು.
ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು. ರಾಜ್ಯದಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಅಸ್ಪೃಶ್ಯ ಮಾದಿಗ ಜನರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಾದಿಗ ಮಹಾಸಭಾ ಅಧ್ಯಕ್ಷ ಆರ್. ಶಿವಣ್ಣ, ಪ್ರಮುಖರಾದ ಎಂ. ಗುರುಮೂರ್ತಿ, ಲೋಕೇಶ್ ತಿಮ್ಲಾಪುರ, ಮಂಜುನಾಥ, ಲಕ್ಷ್ಮಣ ಮತ್ತಿತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement