ಲೋಕಸಭೆ ಚುನಾವಣೆಗೆ ಸಿದ್ಧರಾಗಿ: ಭಂಡಾರಿ
ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತರು ತಮ್ಮಲ್ಲಿರುವ ಭಿನ್ನಮತ ಮರೆತು ಮುಂದಿನ ಲೋಕಸಭೆ ಚುನಾವಣೆಗೆ ಒಟ್ಟಾಗಿ ಶ್ರಮಿಸಬೇಕು ಎಂದು ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಕರೆ ನೀಡಿದರು.
ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಾಸಿಕ ಸಭೆಯಲ್ಲಿ ಅವರು, ಕಾರ್ಯಕರ್ತರು ಮತದಾರರಲ್ಲಿ ಪಕ್ಷದ ಬಗ್ಗೆ ಸದಾಭಿಪ್ರಾಯ ಮೂಡಿಸಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕಾರ್ಯ ಯೋಜನೆ ಸಿದ್ದಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯ ಸಾಧಿಸಬೇಕು. ಮತ್ತೆ ಕಾಂಗ್ರೆಸ್ ಪಕ್ಷ ಪ್ರಾಬಲ್ಯ ಸಾಧಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಸಾಮೂಹಿಕವಾಗಿ ಜನರ ಬಳಿಗೆ ತೆರಳಿ ಅವರ ಕಷ್ಟಗಳ ಬಗ್ಗೆ ಚರ್ಚಿಸಬೇಕು ಎಂದ ಅವರು, ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪರವಾದ ಅಲೆ ಕಂಡುಬರುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉತ್ತಮ ಯೋಜನೆಗಳು, ಜನಪರ ಆಡಳಿತ ಪಕ್ಷದ ಗೆಲುವಿಗೆ ಪೂರಕವಾಗಲಿದೆ ಎಂದರು.
ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪಿ. ರುದ್ರೇಶ್, ಸದಸ್ಯತ್ವ ನೋಂದಣೆ ಪ್ರಕ್ರಿಯೆಯನ್ನು ಕಾರ್ಯಕರ್ತರು ಹಾಗೂ ಮುಖಂಡರು ಸಮರ್ಪಕವಾಗಿ ಮಾಡಬೇಕು. ಕಾಲಮಿತಿಯಲ್ಲಿ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ನೋಂದಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. 1ನೇ ವಾರ್ಡ್ ಸೋಮಿನಕೊಪ್ಪದ ಬಳಿ ಶಿಥಿಲಾವಸ್ಥೆಯಲ್ಲಿರುವ ನೂತನ ಸೇತುವೆ ನಿರ್ಮಾಣ ಮಾಡುವುದು ಸೇರಿದಂತೆ ವಿವಿಧ ವಾರ್ಡ್ಗಳ ಸಮಸ್ಯೆಗಳ ಪರಿಹಾರಕ್ಕೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಮನವಿ ಅರ್ಪಿಸಲಾಗುವುದು ಎಂದರು.
ಸಭೆಯಲ್ಲಿ ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಮುಖಂಡರಾದ ಇಸ್ಮಾಯಿಲ್ ಖಾನ್, ರವಿಕುಮಾರ್, ಹಾಲಪ್ಪ, ಶಿವಾನಂದ್, ಎಚ್.ಸಿ. ಯೋಗೀಶ್, ಸಯ್ಯದ್ ವಾಹೀದ್ ಅಡ್ಡು, ಸಿದ್ದಪ್ಪ ಮತ್ತಿತರರು ಇದ್ದರು.