10ರಂದು ಏತ ನೀರಾವರಿಗೆ ಶಂಕುಸ್ಥಾಪನೆ
ಶಿವಮೊಗ್ಗ: ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ತಾಲೂಕಿನ ತುಂಗಾ ಏತ ನೀರಾವರಿ ಯೋಜನೆಗೆ ಫೆ.10ರಂದು ಬೆಳಗ್ಗೆ 11 ಗಂಟೆಗೆ ಆಯನೂರು ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಜಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ವೇಳೆ ಅಂದು ಶಾಸಕರಾಗಿದ್ದ ಆಯನೂರು ಮಂಜುನಾಥ್ ಹೋರಾಟದ ಫಲಶೃತಿಯಾಗಿ ಈ ಯೋಜನೆಗೆ ಸರ್ಕಾರ ಅಂಗೀಕಾರ ನೀಡಿತ್ತು.
ರು. 25 ಕೋಟಿ ಅಂದಾಜು ವೆಚ್ಚ ಸಿದ್ಧಪಡಿಸಲಾಗಿತ್ತು. ಆದರೆ ಅರಣ್ಯ ಇಲಾಖೆ ತಕರಾರು ಎತ್ತಿದ ಕಾರಣ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ಕಾರ್ಯರೂಪಕ್ಕೆ ಬರುತ್ತಿದೆ ಎಂದು ಹೇಳಿದರು.
ಅರಣ್ಯ ಇಲಾಖೆ ತಕರಾರು ಸದ್ಯ ಬಗೆಹರಿದಿದೆ. ಹೊಸ ಅಂದಾಜು ಪಟ್ಟಿಯಂತೆ ಸುಮಾರು ರು. 60 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಸರ್ವೆ ಕಾರ್ಯ, ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ, ಹಣ ಕೂಡ ಬಿಡುಗಡೆಯಾಗಿದೆ. ಸಿಎಂ ಶಂಕುಸ್ಥಾಪನೆ ನೆರವೇರಿಸುತ್ತಿದ್ದಂತೆ ಕಾಮಗಾರಿಗೆ ಚಾಲನೆ ದೊರೆಯಲಿದೆ. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
5 ಸಾವಿರ ಎಕರೆಗೆ ನೀರು: ತುಂಗಾ ನದಿಯಿಂದ ಪೈಪ್ ಮೂಲಕ ಕೆರೆಗಳಿಗೆ ನೀರು ಪೂರೈಕೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಜಾಕ್ವೆಲ್ ಮೂಲಕ ಹಾಯ್ಹೊಳೆ, ಬಾರೇಹಳ್ಳ, ಗೌಡನಕೆರೆ ಸೇರಿದಂತೆ ಸುತ್ತಮುತ್ತಲಿನ ಕೆರೆಗಳಿಗೆ ನೀರು ಪೂರೈಕೆ ಮಾಡಲಾಗುವುದು.
ಇದರಿಂದ ಸರಿಸುಮಾರು ಐದು ಸಾವಿರ ಎಕರೆ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ ಎಂದು ವಿವರಿಸಿದರು.
ಕೃಷಿ ವಿಶ್ವವಿದ್ಯಾನಿಲಯ, ಸುವರ್ಣ ಗ್ರಾಮ ಯೋಜನೆ, ವಿಜ್ಞಾನ ಕೇಂದ್ರ ಸ್ಥಾಪನೆ, ಆಯನೂರು-ಹೊಳಲೂರು-ಚೋರಡಿ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಆಯನೂರಿನಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೂ ಕೂಡ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಜಿ.ಪಂ. ಮಾಜಿ ಅಧ್ಯಕ್ಷ ಬಸವರಾಜಪ್ಪ, ನಗರಸಭೆ ಮಾಜಿ ಅಧ್ಯಕ್ಷ ರಾಜಶೇಖರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.