ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಕ್ಸಲ್ ಪೀಡಿತ ಪ್ರದೇಶ ಅಭಿವೃದ್ಧಿಗೆ ನಿರ್ಧಾರ

Rashmi Kasaragodu
Updated On : 30 Jan 2013, 11:14 am



ಶಿವಮೊಗ್ಗ: ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶದ ಗ್ರಾಮಗಳಲ್ಲಿ ಎರಡನೇ ಹಂತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.
ಈ ಪ್ರದೇಶಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಥಮ ಕಂತಿನ ಅನುದಾನ ಪಡೆದಿರುವ ಅಧಿಕಾರಿಗಳು ತಕ್ಷಣವೇ ಹಣ ಬಳಕೆ ಪ್ರಮಾಣ ಪತ್ರವನ್ನು ನೀಡುವುದರ ಜೊತೆಗೆ 2ನೇ ಕಂತಿನ ಸಹಾಯ ಧನಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೇದಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೂರ್ಣಗೊಳಿಸಿ ವರದಿ ನೀಡಿ: ಈಗಾಗಲೇ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿ ನಕ್ಸಲ್ ಪೀಡಿತ ಪ್ರದೇಶಾಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿಸಿಯವರು, ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.
ಮೆಸ್ಕಾಂನಿಂದ 16 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ 9 ಕಾಮಗಾರಿಗಳಲ್ಲಿ 8 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 1 ಕಾಮಗಾರಿಯನ್ನು 1 ತಿಂಗಳ ಅವಧಿಯೊಳಗಾಗಿ ಪೂರ್ಣಗೊಳಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅಂತೆಯೇ 107 ಸೋಲಾರ್ ದೀಪಗಳನ್ನು ಅಳವಡಿಸಲು ನಿರ್ಮಿತಿ ಕೇಂದ್ರದ ನಾಗರಾಜ್ ಅವರಿಗೆ ಸೂಚಿಸಿದರು.
ಕಪ್ಪುಪಟ್ಟಿಗೆ ಸೇರಿಸಿ: ನಕ್ಸಲ್ ಪ್ಯಾಕೇಜ್‌ನಡಿ ಟೆಂಡರ್ ಪಡೆದ ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಟೆಂಡರ್ ಪಡೆದು ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಹೇಳಿದರು.
ನಕ್ಸಲ್‌ಪ್ಯಾಕೇಜ್ ಅನುಷ್ಠಾನದಲ್ಲಿ ಯಾವುದೇ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರಬಾರದು. ಗೊಂದಲಕ್ಕೆ ಅವಕಾಶವಾಗದಂತೆ ನೋಡಿಕೊಳ್ಳಬೇಕು. ಈಗಾಗಲೆ ಅನುದಾನ ಬಿಡುಗಡೆ ಮಾಡಿರುವುದರಿಂದ ಕಾಲಮಿತಿಯೊಳಗೆ ಕಾಮಗಾರಿ ಮುಗಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
5 ಕೋಟಿ ಬಿಡುಗಡೆ: ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸಂಜಯ ಬಿಜ್ಜೂರ್ ಮಾತನಾಡಿ, ಜಿಲ್ಲೆಯ ಹೊಸನಗರ ಮತ್ತು ತೀರ್ಥಹಳ್ಳಿಯ ದೂರ ಮತ್ತು ಹಿಂದುಳಿದ ಪ್ರದೇಶದ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ತಲಾ 5 ಕೋಟಿ ಬಿಡುಗಡೆಗೊಳಿಸಿದೆ. ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕೈಗೊಂಡಿರುವ ಈ ಕಾರ್ಯಕ್ರಮ ಅನುಷ್‌ಠಾನದಿಂದಾಗಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲೇ ನಂಬರ್ 1ನೇ ಸ್ಥಾನ ಪಡೆದುಕೊಂಡಿದೆ ಎಂದರು.
63 ಕಾಮಗಾರಿಗಳ ಪಟ್ಟಿ ಸಲ್ಲಿಕೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ನಕ್ಸಲ್ ಪೀಡಿತ ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಸುಮಾರು 63 ಕಾಮಗಾರಿಗಳ ವಿವರಗಳ ಪಟ್ಟಿಯನ್ನು ಜಿಲ್ಲಾಧಿಕಾರಿಯವರಿಗೆ ನೀಡಿದರು. ಇದನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಡಿಸಿಯವರು ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಹಾಗೂ ಜಿ.ಪಂ. ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ವೈಶಾಲಿ, ಪ್ರವೀಣ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ತೀರ್ಥಹಳ್ಳಿ ತಾಲೂಕು ಬಿರದಗೋಡು ವ್ಯಾಪ್ತಿಯ ಉಲ್ಮಡಿ ಸೇತುವೆ ಮತ್ತು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಪ್ರತ್ಯೇಕ ಪ್ಯಾಕೇಜ್ ಮಾಡಿ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದಿಂದ ನಿರ್ವಹಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಉಪವಿಭಾಗಾಧಿಕಾರಿ ಪ್ರವೀಣಕುಮಾರ್, ಎಂ.ಎಲ್. ವೈಶಾಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಸ್. ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಅಧಿಕಾರಿಗಳಿಗೆ ಎಚ್ಚರಿಕೆ ಗಂಟೆ: ಜಿಲ್ಲಾಧಿಕಾರಿ


ಜಿಲ್ಲೆಯ ಮೂಲಭೂತ ಸೌಕರ್ಯ ವಂಚಿತ, ದೂರ ಮತ್ತು ಅತಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಹಾಗೂ ಸಭೆಗೆ ಬಾರದ ಸಾಗರ ಉಪವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್ ಮತ್ತು ಹೊಸನಗರದ ಸಹಾಯಕ ಕಾರ್ಯಪಾಲಕ ಅಭಿಯಂತರ ದೇಸಾಯಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿಯವರು ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರಿಗೆ ಸೂಚಿಸಿದ್ದಾರೆ. ಮುಂದಿನ ಸಭೆಗೆ ಯಾವೆಲ್ಲಾ ಅಧಿಕಾರಿಗಳು ಗೈರು ಹಾಜರಾಗುತ್ತಾರೋ ಅವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ಡಿಸಿ ಇದೇ ಸಂದರ್ಭದಲ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement