ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗ್ರಾಪಂ ಅಧಿಕಾರ ಮೊಟಕಿಗೆ ವಿರೋಧ

Mainashree
Updated On : 7 Jul 2013, 11:21 am

ಕ.ಪ್ರ.ವಾರ್ತೆ  ಶಿವಮೊಗ್ಗ  ಜು.6
ಗ್ರಾಪಂ ಅಧಿಕಾರ ಮೊಟಕುಗೊಳಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಪ್ರತಿಭಟನಾ ಸಭೆ ಜು.8ರಂದು ಆಯೋಜನೆಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಬಿ.ಎಚ್. ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಸಭೆ ಉದ್ಘಾಟನೆಗೊಳ್ಳಲಿದ್ದು, ಮಹತ್ವದ ವಿಷಯ ಚರ್ಚೆಗೆ ಬರಲಿದೆ ಎಂದವರು ಹೇಳಿದ್ದಾರೆ.
 ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ 1993ರ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದ್ದು, ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿರುತ್ತದೆ.
 ಈ ಮಸೂದೆ ಜಾರಿಗೆ ಬಂದಲ್ಲಿ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ ಮೂಲಭೂತ ಹಕ್ಕು ಮೊಟಕುಗೊಳಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.
ಸರ್ಕಾರದ ಹುನ್ನಾರ: ಗ್ರಾಮ ಸಭೆ ಮತ್ತು ಗ್ರಾಮ ಪಂಚಾಯಿತಿ ಮಾಸಿಕ ಸಭೆಗಳು ಗ್ರಾಮಪಂಚಾಯಿತಿ ಅಭಿವೃದ್ಧಿ ದೃಷ್ಟಿಯಿಂದ ನಡೆಯಬೇಕೆಂಬ ಉದ್ದೇಶ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಇದ್ದೇ ಇರುತ್ತದೆ. ಕಾರ್ಯಾಂಗದ ವೈಫಲ್ಯದಿಂದ ಇದಕ್ಕೆ ಚ್ಯುತಿ ಬಂದಲ್ಲಿ ಅದರ ಹೊಣೆಯನ್ನು ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ ಮೇಲೆ ಹೇರಿ ಅವರನ್ನು ಸದಸ್ಯತ್ವದಿಂದ ವಜಾ ಮಾಡುವುದು ವಿಕೇಂದ್ರೀಕರಣದ ಮೂಲ ಹಂತದ ಚುನಾಯಿತ ಸದಸ್ಯರ ಕಾರ್ಯನಿರ್ವಹಣೆಯನ್ನು ಸರ್ಕಾರ ತನ್ನ ಕಪಿ ಮುಷ್ಟಿಯಲ್ಲಿ ಇಟ್ಟುಕೊಳ್ಳುವ ಹುನ್ನಾರವಾಗಿರುತ್ತದೆ.
ಈ ದಿಸೆಯಲ್ಲಿ ಸರ್ಕಾರದ ದುರುದ್ದೇಶದ ಈ ಜನತಂತ್ರ ವಿರೋಧಿ ಕರಾಳ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯಲು ಒಕ್ಕೊರಲಿನಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಈ ಪ್ರತಿಭಟನಾ ಸಭೆ ಹಮ್ಮಿಕೊಂಡಿರುವುದಾಗಿ ಅವರು ಹೇಳಿದ್ದಾರೆ.
ಸಭೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ಪಿ.ವಿ. ಕೃಷ್ಣಭಟ್, ಮಾಜಿ ಶಾಸಕ ಆರಗ ಜ್ಞಾನೇಂದ್ರ ಕೆ.ಜಿ. ಕುಮಾರಸ್ವಾಮಿ, ಎಂ. ಬಸವರಾಜ ನಾಯ್ಕ್, ಕಾಡಾ ಮಾಜಿ ಅಧ್ಯಕ್ಷ ಗಿರೀಶ್ ಪಟೇಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಜಿ.ಪಂ. ಸದಸ್ಯರು, ತಾಪಂ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
   ಶಿವಮೊಗ್ಗ ಜಿಲ್ಲೆಯ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ ತಾಲೂಕುಗಳ ಎಲ್ಲ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಸದಸ್ಯರು, ಜನ ಪ್ರತಿನಿಧಿಗಳು, ವಿಕೇಂದ್ರೀಕರಣದ ಜನತಂತ್ರ ಪ್ರೇಮಿಗಳು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ವಿನಂತಿಸುವುದಾಗಿ ಸಿದ್ದರಾಮಣ್ಣ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement