ಕಾಮಗಾರಿ ಪೂರ್ಣಗೊಳಿಸಿ
ಕ.ಪ್ರ.ವಾರ್ತೆ ಶಿವಮೊಗ್ಗ ಜು.24 ಜಿಲ್ಲೆಯ ದೂರ ಮತ್ತು ಹಿಂದುಳಿದ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ದೂರ ಮತ್ತು ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಈ ಪ್ರದೇಶಗಳಲ್ಲಿ ಈಗಾಗಲೇ ಅನುಮೋದನೆ ಪಡೆದು ಆರಂಭಿಸಲಾದ ಕಾಮಗಾರಿಗಳನ್ನು ವಿಳಂಬ ಗತಿಯಲ್ಲಿ ಸಾಗುತ್ತಿರುವುದರ ಬಗ್ಗೆ ಅಸಮಾದಾನ ವ್ಯಕ್ತಪಡಿಸಿದ ಅವರು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಮುಂದಿನ ಸಭೆಯ ಒಳಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗೆ ಆಗಮಿಸುವ ಮೊದಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಈವರೆಗಿನ ಕಾಮಗಾರಿಗಳ ಪ್ರಗತಿಯನ್ನು ಗಮನಿಸಿ, ಸಂಕ್ಷಿಪ್ತ ವರದಿಯನ್ನು ತಯಾರಿಸಿಕೊಂಡು ಸಭೆಗೆ ಆಗಮಿಸುವಂತೆ ಸೂಚಿಸಿದರಲ್ಲದೇ, ಅಗತ್ಯವಿರುವ ಕಡೆಗಳಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಜಾನುವಾರು ತಪಾಸಣಾ ಶಿಬಿರ: ಸಾಗರ ಮತ್ತು ಶಿವಮೊಗ್ಗ ವಿಭಾಗದ ತಾಂತ್ರಿಕ ಸಹಾಯಕರು ದೂರ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಕೈಗೊಂಡ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಒಂದು ವಾರದ ಅವಧಿಯೊಳಗಾಗಿ ವರದಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಜಾನುವಾರು ತಪಾಸಣಾ ಶಿಬಿರಗಳನ್ನು ನಡೆಸುವಂತೆ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಅರೇಹಳ್ಳಿ ಮತ್ತು ಕೆಸಲೂರು ಉಪಗ್ರಾಮ ಮತ್ತು ಹೊನ್ನೆತಾಳು, ಚೆಂಗಾರು ನೆಂಟೂರು ಉಪಗ್ರಾಮಗಳಲ್ಲಿನ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ದಯಾಳು, ಉಪವಿಭಾಗಾಧಿಕಾರಿ ಕುಸುಮಾ ಕುಮಾರಿ ಇದ್ದರು.